ದೇಶದ ಕಾರ್ಮಿಕ ವರ್ಗ ನಿರಂತರವಾಗಿ ಪ್ರತಿರೋಧ ವ್ಯಕ್ತಪಡಿಸುತ್ತಿರುವ ವೇಳೆ, ದುಡಿಯುವ ಜನರ ಅಭಿಪ್ರಾಯಗಳನ್ನು ತಿರಸ್ಕರಿಸಿ ವಿದೇಶಿ ಹಾಗೂ ಸ್ವದೇಶಿ ಕಾರ್ಪೊರೇಟ್ ಬಂಡವಾಳಿಗರ ಅನುಕೂಲಕ್ಕಾಗಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರಲಾಗಿದೆ ಎಂದು ಸಿ.ಐ.ಟಿ.ಯು ಜಿಲ್ಲಾ ಸಂಚಾಲಕ ಲಕ್ಷ್ಮಣ ಹಂದ್ರಾಳ ಹೇಳಿದರು.
ವಿಜಯಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸಿ.ಐ.ಟಿ.ಯು ಜಿಲ್ಲಾ ಸಮಿತಿ ವತಿಯಿಂದ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಕೇಂದ್ರದ ಎನ್.ಡಿ.ಎ. ಸರ್ಕಾರ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಡೆಗಣಿಸಿ ಮೇ 8ರಂದು ನಾಲ್ಕು ಕಾರ್ಮಿಕ ಸಂಹಿತೆಗಳ ಅಂತಿಮ ನಿಯಮಾವಳಿಗಳನ್ನು ಪ್ರಕಟಿಸಿದೆ. ಕಾರ್ಮಿಕ ಸಂಘಟನೆಗಳು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಗಣಿಸದೆ ಕಾರ್ಪೊರೇಟ್ ಬಂಡವಾಳಿಗರ ಅನುಕೂಲಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿ.ಐ.ಟಿ.ಯು ಸಹ ಸಂಚಾಲಕ ಸುರೇಶ ಜೀಬಿ ಮಾತನಾಡಿ, “ಈ ಸಂಹಿತೆಗಳು ಕಾರ್ಮಿಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುವುದರ ಜೊತೆಗೆ ಕಾಯಂ ಉದ್ಯೋಗ ಅವಕಾಶಗಳನ್ನು ಕಡಿಮೆ ಮಾಡುವುದರ ಮೂಲಕ ಗುಲಾಮಗಿರಿ ರೂಢಿಸುವ ಅಪಾಯವಿದೆ” ಎಂದು ಕಳವಳ ವ್ಯಕ್ತಪಡಿಸಿದರು.
ಇದನ್ನೂ ಓದಿ>ವಿಜಯಪುರ | ಕಾರ್ಮಿಕ ವಿರೋಧಿ ನೀತಿಗಳ ಮೂಲಕ ಗುಲಾಮಗಿರಿಗೆ ತಳ್ಳಲಾಗುತ್ತಿದೆ: ಎನ್ ವೀರೇಶ್
“ನಿರುದ್ಯೋಗ, ಹಣದುಬ್ಬರ ಮತ್ತು ಬೆಲೆ ಏರಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಈ ಕ್ರಮ ಕಾರ್ಮಿಕ ವರ್ಗದ ಮೇಲೆ ಅಮಾನವೀಯ ಒತ್ತಡ ತರುತ್ತಿದೆ. ಕೇಂದ್ರ ಸರ್ಕಾರ ತಕ್ಷಣ ಈ ಸಂಹಿತೆಗಳನ್ನು ಹಿಂಪಡೆಯಬೇಕು” ಎಂದು ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸುನಂದಾ ನಾಯಕ, ಭಾರತಿ ವಾಲಿ, ಸುರೇಖಾ ವಾಗೋರೆ, ಲಾಲ್ ಅಹಮ್ಮದ್ ಶೇಖ, ಗೀತಾ ನಾಯಕ, ರಿಜ್ವಾನಾ ಕುರೋಶಿ, ರೇಣುಕಾ ಗುಂಡಪ್ಪನವರ, ಶ್ರೀದೇವಿ ವಗ್ಯನವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.




