ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉತ್ತರಾಖಂಡದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುಚಿಗೊಳಿಸಿದ ಕೃತ್ಯವನ್ನು ಖಂಡಿಸಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಆರ್. ಧರ್ಮಸೇನಾ, ನಾಗಠಾಣ ಶಾಸಕ ವಿಠಲ ಕಟಕದೊಂಡ ಹಾಗೂ ವಿಜಯಪುರ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಮೇಶ ಗುಬ್ಬೆವಾಡ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಈ ವೇಳೆ ಮಾತನಾಡಿದ ಆರ್. ಧರ್ಮಸೇನಾ, “ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುಚಿಗೊಳಿಸಿರುವ ಕೃತ್ಯವನ್ನು ತೀವ್ರವಾಗಿ ಖಂಡಿಸಿದರು. ಈ ಘಟನೆ ಕುರಿತು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅವರು ಕೂಡ ಖಂಡನೆ ವ್ಯಕ್ತಪಡಿಸಬೇಕಾಗಿತ್ತು. ಆದರೆ ಅವರು ಮೌನ ವಹಿಸಿರುವುದು ಖಂಡನೀಯ” ಎಂದರು.
ಬಿಜೆಪಿ ಮನುವಾದಿ ಮನಸ್ಥಿತಿಯನ್ನು ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದ ಅವರು, ಕೃತ್ಯದಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಮೇಶ ಗುಬ್ಬೆವಾಡ ಮಾತನಾಡಿ, “ಬಿಜೆಪಿ ಪರಿಶಿಷ್ಟ ಜಾತಿಯವರು, ಕೂಲಿ ಕಾರ್ಮಿಕರು ಹಾಗೂ ಬಡವರನ್ನು ನಿರಂತರವಾಗಿ ತುಳಿತಕ್ಕೊಳಪಡಿಸುತ್ತಿದೆ” ಎಂದು ಆರೋಪಿಸಿದರು.
“ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುಚಿಗೊಳಿಸಿರುವುದು ಜಾತೀಯ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಕೃತ್ಯ ಎಸಗಿದವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ವೈಜನಾಥ ಕರ್ಪೂರಮಠ, ಚಾಂದಸಾಬ ಗಡಗಲಾವ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಹೊನಮೊಡೆ, ಮಹಾನಗರ ಪಾಲಿಕೆ ಸದಸ್ಯೆ ಆರತಿ ಶಹಾಪುರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಹಾಜಹಾನ ಮುಲ್ಲಾ, ಸಂತೋಷ ಬಾಲಗಾಂವಿ, ಕೆಪಿಸಿಸಿ ಎಸ್‌ಸಿ ವಿಭಾಗದ ಕನಿರಾಮ ರಾಠೋಡ, ದಿನೇಶ, ಸುಭಾಷ್, ಕಾಳಯ್ಯ, ಕೃಷ್ಣ ಲಮಾಣಿ, ಸಿದ್ದು ತೋಟದ, ದುರ್ಗಪ್ಪ ಸಂಕದ, ಪರಶರಾಮ ಜಮಖಂಡಿ, ದಶರಥ ಪಡಸಲಗಿ, ವಿಠಲ ಸಂದಿಮನಿ, ರಾಹುಲ್ ಐನಾಪುರ, ಮೈಬೂಬ ಕಲಾದಗಿ, ಹಮೀದಾ ಪಟೇಲ, ಸರಿತಾ ಧನರಾಜ್, ವಸೀಮ ತಾವರಗೇರಿ, ದಿಲೀಪ್ ಪ್ರಭಾಕರ ಸೇರಿದಂತೆ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.




