ಭಾರತೀಯ ಸಂವಿಧಾನವು ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಒಳಗೊಂಡಿದ್ದು, ಪ್ರಜಾಪ್ರಭುತ್ವದ ಭದ್ರ ತಳಹದಿಯಾಗಿದೆ. ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು ಮತ್ತು ಗೌರವಯುತ ಬದುಕಿನ ಅವಕಾಶ ಕಲ್ಪಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಅನನ್ಯ ಎಂದು ಶಾಸಕ ವಿಠಲ ಕಟಕಧೋಂಡ ಹೇಳಿದರು.
ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಗೌತಮ ಬುದ್ಧ, ಬಸವಣ್ಣ ಹಾಗೂ ಅಂಬೇಡ್ಕರ್ ಅವರ ಸಮಾನತೆ, ಮಾನವೀಯತೆ ಮತ್ತು ಸಾಮಾಜಿಕ ನ್ಯಾಯದ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ.
ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾನತೆ ಮತ್ತು ಸೌಹಾರ್ದ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.ಜಿಲ್ಲಾಧಿಕಾರಿ ಡಾ. ಆನಂದ ಕೆ. ಮಾತನಾಡಿ, ಸಂವಿಧಾನ ಕೇವಲ ಕಾನೂನುಗಳ ದಾಖಲೆಯಲ್ಲ, ಅದು ದೇಶದ ಆಡಳಿತ ವ್ಯವಸ್ಥೆ ಹಾಗೂ ಪ್ರಜಾಪ್ರಭುತ್ವದ ಮೂಲಾಧಾರವಾಗಿದೆ. ಸಂವಿಧಾನದ ಪೀಠಿಕೆ ಪ್ರತಿಪಾದಿಸುವ ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ವ್ಯಕ್ತಿಗೌರವದ ಮೌಲ್ಯಗಳನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಹಕ್ಕುಗಳ ಜೊತೆಗೆ ನಾಗರಿಕ ಕರ್ತವ್ಯಗಳನ್ನೂ ಪಾಲಿಸುವುದು ಪ್ರಜಾಪ್ರಭುತ್ವ ಬಲವರ್ಧನೆಗೆ ಅಗತ್ಯ ಎಂದರು.
ಸಾಹಿತಿ ರಂಜಾನ್ ದರ್ಗಾ ಉಪನ್ಯಾಸ ನೀಡಿ, ಸಂವಿಧಾನದ ಮೂಲ ಆಶಯ ಎಲ್ಲರನ್ನು ಒಳಗೊಳ್ಳುವ ಸಂಸ್ಕೃತಿ ಹಾಗೂ ಸಮಾನ ಅವಕಾಶವಾಗಿದೆ. ಬಸವಣ್ಣನವರ ವಚನಗಳು ಮತ್ತು ಶರಣರ ವಿಚಾರಧಾರೆಗಳು ಮಾನವೀಯತೆ ಹಾಗೂ ಸಮಾನತೆಯ ಸಂದೇಶ ಸಾರುತ್ತವೆ. ವಿವಿಧ ಭಾಷೆ, ಸಂಸ್ಕೃತಿ ಮತ್ತು ಪ್ರಾದೇಶಿಕ ವೈವಿಧ್ಯತೆಗಳನ್ನು ಹೊಂದಿರುವ ದೇಶವನ್ನು ಸಂವಿಧಾನದ ಚೌಕಟ್ಟಿನಲ್ಲಿ ಒಗ್ಗೂಡಿಸುವಲ್ಲಿ ಅಂಬೇಡ್ಕರ್ ಅವರ ಕೊಡುಗೆ ಮಹತ್ವದ್ದಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮೇಯರ್ ಮಡಿವಾಳಪ್ಪ ಕರಡಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ ಪ್ರಕಾಶ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಶಿವಾನಂದ ಬಡಿಗೇರ ನಿರೂಪಿಸಿದರು.



