ಗ್ರಾಮೀಣ ಭಾಗದ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ, ಸಂಶೋಧನಾ ಮನೋಭಾವ ಹಾಗೂ ವೈಚಾರಿಕ ಪ್ರಜ್ಞೆ ಬೆಳೆಸುವ ಉದ್ದೇಶದಿಂದ ನ.14ರಂದು ಮಕ್ಕಳ ದಿನಾಚರಣೆಯ ಅಂಗವಾಗಿ ತಿಕೋಟಾದ ಎ.ಬಿ. ಜತ್ತಿ ಶಾಲೆಯ ಆವರಣದಲ್ಲಿ ರಾಜ್ಯಮಟ್ಟದ ವಿಜ್ಞಾನ ಜಾತ್ರೆ ಆಯೋಜಿಸಲಾಗಿದೆ.
ಈ ಮಹತ್ವದ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಜಿಲ್ಲೆಯ ಶೈಕ್ಷಣಿಕ ವಲಯದಲ್ಲಿ ಕುತೂಹಲ ಮೂಡಿಸಿದೆ.’ವಿಜ್ಞಾನ ಸ್ವಾಮೀಜಿ’ ಎಂದೇ ಪ್ರಸಿದ್ಧರಾಗಿರುವ ನಾಗನೂರು ರುದ್ರಾಕ್ಷಿ ಮಠದ ಡಾ. ಸಿದ್ಧರಾಮ ಮಹಾಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನಡೆಯುವ ಜಾತ್ರೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ ಎಂದು ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ತಿಳಿಸಿದ್ದಾರೆ.
ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ವಿಜ್ಞಾನ ಪ್ರದರ್ಶನದ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಧಾರವಾಡದ ಅಪರ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಜಿಲ್ಲಾಧಿಕಾರಿ ಡಾ. ಕೆ. ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
ನಾಲ್ಕು ವಿಭಾಗಗಳಲ್ಲಿ ವಿಜ್ಞಾನ ಪ್ರದರ್ಶನಅಂದು ಬೆಳಿಗ್ಗೆ 11 ಗಂಟೆಗೆ ನಾಲ್ಕು ವಿಭಾಗಗಳಲ್ಲಿ ವಿಜ್ಞಾನ ಪ್ರದರ್ಶನ ಮಳಿಗೆಗಳಿಗೆ ಚಾಲನೆ ನೀಡಲಾಗುವುದು. ವಿಜ್ಞಾನದ ವಿವಿಧ ಆವಿಷ್ಕಾರಗಳು, ಪ್ರಯೋಗಗಳು ಹಾಗೂ ವಿದ್ಯಾರ್ಥಿಗಳ ಸೃಜನಶೀಲ ಮಾದರಿಗಳು ಪ್ರದರ್ಶನಗೊಳ್ಳಲಿವೆ.
ಸಿಎಸ್‌ಆರ್ ಅನುದಾನ ಸೇರಿದಂತೆ ಶಾಲಾ ಅಭಿವೃದ್ಧಿಯ ಸಾಧನೆಗಳನ್ನು ಪರಿಚಯಿಸುವ ಸಾಕ್ಷ್ಯಚಿತ್ರವೂ ಪ್ರದರ್ಶನವಾಗಲಿದೆ.ದೊಡ್ಡ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸುತ್ತಿರುವುದು ಈ ಭಾಗದಲ್ಲಿ ಇದೇ ಮೊದಲ ಬಾರಿಯಾಗಿದೆ. ಗ್ರಾಮೀಣ ಮಕ್ಕಳಿಗೆ ವಿಜ್ಞಾನದ ಜಗತ್ತನ್ನು ಪರಿಚಯಿಸಿ, ಅವರಲ್ಲಿ ಪ್ರಶ್ನಿಸುವ, ಪರಿಶೀಲಿಸುವ ಮತ್ತು ಹೊಸದನ್ನು ಆವಿಷ್ಕರಿಸುವ ಮನೋಭಾವ ಬೆಳೆಸುವ ಆಶಯ ಹೊಂದಿರುವ ಈ ವಿಜ್ಞಾನ ಜಾತ್ರೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ ಎಂದು ಬಸವರಾಜ ತಳವಾರ ತಿಳಿಸಿದ್ದಾರೆ.




