ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ಹಾಗೂ ಲಡಾಖ್‌ನ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಶಾಂತಿಯುತ ಹೋರಾಟಕ್ಕೆ ಬೆಂಬಲ ಸೂಚಿಸಿ ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾ ಘಟಕದ ನೇತೃತ್ವದೊಂದಿಗೆ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರೆವಣಿಗೆ ನಗರದ ವಿವಿಧ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು. ಬಳಿಕ ಪ್ರತಿಭಟನಾಕಾರರು ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ, ಕೇಂದ್ರ ಸರ್ಕಾರ ವಿದ್ಯಾರ್ಥಿ ಹಾಗೂ ಯುವಜನರ ಆಶೋತ್ತರಗಳಿಗೆ ಸ್ಪಂದಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ ಪೂಜಾರಿ, “ಲಡಾಖ್‌ನ ಪರಿಸರ ಮತ್ತು ಜನರ ಹಕ್ಕುಗಳ ರಕ್ಷಣೆಗೆ ಸೋನಂ ವಾಂಗ್ಚುಕ್ ನಡೆಸುತ್ತಿರುವ ಶಾಂತಿಯುತ ಹೋರಾಟವನ್ನು ಹತ್ತಿಕ್ಕುವ ಯಾವುದೇ ಪ್ರಯತ್ನ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ಭಿನ್ನಾಭಿಪ್ರಾಯಗಳನ್ನು ದಮನಿಸುವ ಬದಲು ಸರ್ಕಾರ ಸಂವಾದದ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು” ಎಂದು ಆಗ್ರಹಿಸಿದರು.
ಸಾಮಾಜಿಕ ಕಾರ್ಯಕರ್ತ ಅಬೂಬಕರ ಅಂಬರಖಾನೆ ಮಾತನಾಡಿ, “ಕೇಂದ್ರ ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ನಡೆದಿರುವ ಅಕ್ರಮಗಳನ್ನು ತಡೆಯುವಲ್ಲಿ ವಿಫಲವಾಗಿದೆ. ಪರೀಕ್ಷಾ ಅಕ್ರಮಗಳು ಹಾಗೂ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ನಡೆಯುತ್ತಿರುವ ನಿರ್ಲಕ್ಷ್ಯದಿಂದ ಶಿಕ್ಷಣ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ನಂಬಿಕೆ ಕುಸಿದಿದೆ. ಈ ಎಲ್ಲ ಬೆಳವಣಿಗೆಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಜಮಖಂಡಿ | ನೀಟ್ ಅಕ್ರಮ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ
ಪ್ರತಿಭಟನೆಯಲ್ಲಿ ಎಂಎಂಡಿಸಿ ಮುಖಂಡ ಆಫಿಜ್ ಸಿದ್ದಕಿ ಮಾತನಾಡಿದರು. ದಲಿತ ವಿದ್ಯಾರ್ಥಿ ಪರಿಷತ್ ಮುಖಂಡರಾದ ವೆಂಕಟೇಶ ವಗ್ಯನವರ್, ಪ್ರಶಾಂತ ಶಂಕರ್, ಮಾಶಾಳಕರ್ ನಿಜಾಮುದ್ದೀನ್, ಮುನಾಫ್ ಪಟೇಲ್ ಆಲಮೇಲೆ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.





