ವಿದ್ಯಾರ್ಥಿನಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕಣ್ಣಿನ ಆರೋಗ್ಯವನ್ನು ನಿರ್ಲಕ್ಷ್ಯ ಮಾಡದೆ, ಯಾವುದೇ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಜಯಾ ಬಿ. ಕೊರಿಶೆಟ್ಟಿ ಹೇಳಿದರು.
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ನಂದಾದೀಪ ಕಣ್ಣಿನ ಆಸ್ಪತ್ರೆ ವತಿಯಿಂದ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರಿಗಾಗಿ ಆಯೋಜಿಸಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಸಚಿವ ಡಾ. ವಿಜಯಕುಮಾರ ಅಜೂರ ಮಾತನಾಡಿ, “ವಿದ್ಯಾರ್ಥಿನಿಯರು ಓದಿನ ಜತೆಗೆ ಆರೋಗ್ಯಕ್ಕೂ ಆದ್ಯತೆ ನೀಡಬೇಕು. ಕಣ್ಣಿನ ಸಮಸ್ಯೆಗಳನ್ನು ಆರಂಭದಲ್ಲಿಯೇ ಗುರುತಿಸಿ ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ” ಎಂದರು.
ನಂದಾದೀಪ ಕಣ್ಣಿನ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಶಿವಶರಣ ಬೆಟ್ಟದ ಮಾತನಾಡಿ, “ಇಂದಿನ ದಿನಗಳಲ್ಲಿ ಮೊಬೈಲ್, ಕಂಪ್ಯೂಟರ್ ಸೇರಿದಂತೆ ಡಿಜಿಟಲ್ ಸಾಧನಗಳ ಬಳಕೆ ಹೆಚ್ಚಾಗಿರುವುದರಿಂದ ಕಣ್ಣಿನ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯವಾಗಿದೆ. ನಿಯಮಿತವಾಗಿ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳಬೇಕು” ಎಂದು ಹೇಳಿದರು.
This video cannot be played in your browser. Open the video directly
ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕಿ ಪ್ರೊ. ಜ್ಯೋತಿ ಉಪಾಧ್ಯೆ ಮಾತನಾಡಿ, “ವಿದ್ಯಾರ್ಥಿನಿಯರ ಆರೋಗ್ಯದ ಹಿತದೃಷ್ಟಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಶಿಬಿರದ ಸದುಪಯೋಗವನ್ನು ಎಲ್ಲ ವಿದ್ಯಾರ್ಥಿನಿಯರು ಪಡೆದುಕೊಳ್ಳಬೇಕು” ಎಂದರು.
ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಅರೋಗ್ಯ ಕೇಂದ್ರ ಸಿಬ್ಬಂದಿಗಳು, ವಿದ್ಯಾರ್ಥಿನಿಯರು, ಸಂಶೋಧನಾ ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.





