ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹ ನಾಗರಿಕರು ಮತ್ತು ಅಕ್ಟೋಬರ್ 1ರಂದು 18 ವರ್ಷ ಪೂರ್ಣಗೊಳಿಸುವ ಯುವ ಮತದಾರರು ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರ್ಪಡೆ ಮಾಡಿಕೊಳ್ಳಲು ಅವಕಾಶವಿದ್ದು, ಅಕ್ಟೋಬರ್ 27ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ. ಆನಂದ ಕೆ. ತಿಳಿಸಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026ರ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು.
ಕೇಂದ್ರ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್ 23ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿರುವ ಅರ್ಹ ಮತದಾರರು ಈ ಅವಕಾಶವನ್ನು ಬಳಸಿಕೊಳ್ಳಬಹುದು ಎಂದು ಅವರು ತಿಳಿಸಿದರು.
ಆಗಸ್ಟ್ 24ರಿಂದ ಸೆಪ್ಟೆಂಬರ್ 21ರವರೆಗೆ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 12,757 ಅರ್ಜಿಗಳು ಸ್ವೀಕೃತವಾಗಿವೆ. ಇದರಲ್ಲಿ ಹೊಸದಾಗಿ ಹೆಸರು ಸೇರ್ಪಡೆಗಾಗಿ ನಮೂನೆ-6ರಲ್ಲಿ 7,402 ಅರ್ಜಿಗಳು, ಹೆಸರು ಕೈಬಿಡುವಿಕೆಗೆ ಸಂಬಂಧಿಸಿದ ನಮೂನೆ-7ರಲ್ಲಿ 210 ಅರ್ಜಿಗಳು ಹಾಗೂ ಮತದಾರರ ವಿವರಗಳ ತಿದ್ದುಪಡಿಗಾಗಿ ನಮೂನೆ-8ರಲ್ಲಿ 5,145 ಅರ್ಜಿಗಳು ಬಂದಿವೆ. ನಮೂನೆ-6ಎನಲ್ಲಿ ಯಾವುದೇ ಅರ್ಜಿ ಸ್ವೀಕೃತವಾಗಿಲ್ಲ.
ಮತದಾರರ ಪಟ್ಟಿಗೆ ಹೊಸ ಹೆಸರು ಸೇರ್ಪಡೆಗೆ ನಮೂನೆ-6, ವಿದೇಶದಲ್ಲಿರುವ ಭಾರತೀಯ ಮತದಾರರಿಗೆ ನಮೂನೆ-6ಎ, ಹೆಸರು ಕೈಬಿಡುವಿಕೆಗಾಗಿ ನಮೂನೆ-7 ಹಾಗೂ ಮತದಾರರ ವಿವರಗಳ ತಿದ್ದುಪಡಿ ಅಥವಾ ವಿಳಾಸ ಬದಲಾವಣೆಗೆ ನಮೂನೆ-8 ಸಲ್ಲಿಸಬಹುದಾಗಿದೆ.
ಸಂಬಂಧಪಟ್ಟ ಮತದಾರರ ನೋಂದಣಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿ ಅಥವಾ ಮತಗಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಚುನಾವಣಾ ಆಯೋಗದ ವೋಟರ್ ಸರ್ವಿಸ್ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿಯೂ ಅರ್ಜಿ ಸಲ್ಲಿಸುವ ವ್ಯವಸ್ಥೆ ಇದೆ ಎಂದು ಡಾ. ಆನಂದ ಕೆ. ಹೇಳಿದರು.
ಗಣತಿ ಫಾರ್ಮ್‌ಗಳು ಹಾಗೂ ಮತದಾರರ ಪಟ್ಟಿಯಲ್ಲಿರುವ ಮಾಹಿತಿಯಲ್ಲಿ ಹೊಂದಾಣಿಕೆ ಇಲ್ಲದಿರುವುದು, ಕಾಗುಣಿತ ದೋಷಗಳು ಅಥವಾ ಮ್ಯಾಪಿಂಗ್ ಆಗದಿರುವ ಪ್ರಕರಣಗಳಲ್ಲಿ ಸಂಬಂಧಪಟ್ಟ ಮತದಾರರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು. ಈ ವಿಚಾರಣೆ ಪ್ರಕ್ರಿಯೆಯನ್ನು ಅಕ್ಟೋಬರ್ 22ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದರು.
ವಿಚಾರಣೆ ಹಾಗೂ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಎಎಸ್‌ಡಿಡಿಒ ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿದ್ದರೂ, ಅರ್ಹತೆಯನ್ನು ಸಾಬೀತುಪಡಿಸುವ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿಕೊಳ್ಳಬಹುದು ಎಂದು ಸಭೆಯಲ್ಲಿ ತಿಳಿಸಲಾಯಿತು.
ಸಭೆಯಲ್ಲಿ ಚುನಾವಣಾ ತಹಶೀಲ್ದಾರ್ ಪ್ರೇಮಸಿಂಗ್ ಪವಾರ, ಚುನಾವಣಾ ವಿಭಾಗದ ಸಚ್ಚಿದಾನಂದ ತೇರದಾಳ ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಉಮೇಶ ಕಾರಜೋಳ, ಹಮೀದ್ ಮುಶ್ರೀಫ್, ಎಸ್.ಎಸ್. ಖಾದ್ರಿ, ಈರಣ್ಣ ಎನ್. ರಾವೂರ್, ಪ್ರಕಾಶ ಸಬರದ ಸೇರಿದಂತೆ ಇತರರು ಉಪಸ್ಥಿತರಿದ್ದರು.




