ಕನಕದಾಸ ಭಕ್ತಿ, ಸಮಾನತೆ ಮತ್ತು ಮಾನವೀಯತೆಯ ಸಂದೇಶಗಳನ್ನು ಜಯಂತಿ ಆಚರಣೆಗೆ ಸೀಮಿತಗೊಳಿಸದೆ, ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಹೇಳಿದರು.
ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕನಕದಾಸರು ತಮ್ಮ ಸಾಹಿತ್ಯ ಹಾಗೂ ಕೀರ್ತನೆಗಳ ಮೂಲಕ ಜಾತಿ ವ್ಯವಸ್ಥೆ, ಸಾಮಾಜಿಕ ಅಸಮಾನತೆಗಳನ್ನು ಪ್ರಶ್ನಿಸಿ ಸಮಾನತೆ ಮತ್ತು ಮಾನವೀಯತೆಯ ಮೌಲ್ಯಗಳನ್ನು ಸಾರಿದ್ದಾರೆ. ಅವರ ವಿಚಾರಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದ್ದು, ಪ್ರೀತಿ, ಸಹಬಾಳ್ವೆ ಹಾಗೂ ಸಾಮಾಜಿಕ ಸಾಮರಸ್ಯಕ್ಕೆ ಪ್ರೇರಣೆಯಾಗಿವೆ ಎಂದರು.
ಉಪನ್ಯಾಸಕ ದಳವಾಯಿ ಮಾತನಾಡಿ, ಕನಕದಾಸರ ಕೃತಿಗಳು ಭಕ್ತಿಯ ಅಭಿವ್ಯಕ್ತಿಯಷ್ಟೇ ಅಲ್ಲ, ಸಾಮಾಜಿಕ ವ್ಯವಸ್ಥೆಯಲ್ಲಿನ ಅಸಮಾನತೆಗಳ ವಿರುದ್ಧದ ವೈಚಾರಿಕ ಧ್ವನಿಯೂ ಆಗಿವೆ. ‘ಕುಲ ಕುಲವೆಂದು ಹೊಡೆದಾಡದಿರಿ’ ಎಂಬ ಸಂದೇಶದ ಮೂಲಕ ಮನುಷ್ಯನ ಮೌಲ್ಯವನ್ನು ಜನ್ಮಕ್ಕಿಂತ ಗುಣ ಮತ್ತು ನಡವಳಿಕೆ ನಿರ್ಧರಿಸುತ್ತದೆ ಎಂಬ ವಿಚಾರವನ್ನು ಪ್ರತಿಪಾದಿಸಿದ್ದಾರೆ ಎಂದು ವಿವರಿಸಿದರು.
ಮೇಯರ್ ಮಡಿವಾಳಪ್ಪ ಕರಡಿ, ವಸಂತ ಹೊನಮೊಡೆ, ಪಾಲಿಕೆ ಸದಸ್ಯರಾದ ಪ್ರೇಮಾನಂದ ಬಿರಾದಾರ, ರಾಹುಲ್ ಜಾಧವ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮಕ್ಕೂ ಮುನ್ನ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಿಂದ ಕನಕದಾಸರ ಭಾವಚಿತ್ರದ ಮೆರವಣಿಗೆ ರಂಗಮಂದಿರದವರೆಗೆ ನಡೆಯಿತು.



