ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಪೂರ್ವಭಾವಿ ಪರೀಕ್ಷೆ ನವೆಂಬರ್ 15ರಂದು ನಡೆಯಲಿದ್ದು, ಜಿಲ್ಲೆಯಲ್ಲಿ 20 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 8,117 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯನ್ನು ಪಾರದರ್ಶಕವಾಗಿ, ಯಾವುದೇ ಲೋಪದೋಷಗಳಿಲ್ಲದೆ ನಡೆಸಲು ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ್.ಕೆ ತಿಳಿಸಿದರು.
ವಿಜಯಪುರ ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶ್ನೆಪತ್ರಿಕೆಗಳ ಸುರಕ್ಷಿತ ಸಾಗಾಟಕ್ಕೆ ಎಂಟು ಮಾರ್ಗಗಳನ್ನು ಗುರುತಿಸಿ, ಪೊಲೀಸ್ ಭದ್ರತೆ ಒದಗಿಸಲಾಗಿದೆ. ಎಲ್ಲ ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಹಾಗೂ ಮೊಬೈಲ್ ಜಾಮರ್ ಅಳವಡಿಸಲಾಗಿದ್ದು, ಜಿಲ್ಲಾ ಪಂಚಾಯಿತಿ ಕಚೇರಿಯಿಂದ ನೇರ ವೆಬ್‌ಕಾಸ್ಟಿಂಗ್ ಮೂಲಕ ಮೇಲ್ವಿಚಾರಣೆ ನಡೆಸಲಾಗುವುದು ಎಂದರು.
ಅಭ್ಯರ್ಥಿಗಳಿಗೆ ಮುಖ ಗುರುತಿಸುವಿಕೆ ಮೂಲಕ ಹಾಜರಾತಿ ದೃಢೀಕರಿಸಲಾಗುತ್ತದೆ. ಪ್ರವೇಶ ಪತ್ರ, ಗುರುತಿನ ಚೀಟಿ ಹಾಗೂ ಪೆನ್ ಹೊರತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು ಪರೀಕ್ಷಾ ಕೊಠಡಿಗೆ ಕೊಂಡೊಯ್ಯುವಂತಿಲ್ಲ. ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಹಾಗೂ ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ಎರಡು ಅಧಿವೇಶನಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, “ಎಲ್ಲಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಧಾರ್ಮಿಕ ಉಡುಪು ಧರಿಸಿ ಬರುವ ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೂ ಎರಡೂವರೆ ಗಂಟೆ ಮುಂಚಿತವಾಗಿ ಕೇಂದ್ರಕ್ಕೆ ಹಾಜರಾಗಬೇಕು. ಅವರ ತಪಾಸಣೆಗೆ ಪ್ರತ್ಯೇಕ ಅಧಿಕಾರಿಗಳನ್ನು ನೇಮಿಸಲಾಗಿದೆ. ವದಂತಿ ಹಾಗೂ ನಕಲಿ ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಭ್ಯರ್ಥಿಗಳು ವದಂತಿಗಳಿಗೆ ಕಿವಿಗೊಡದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು” ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಗುಳೇದಗುಡ್ಡ ಉಪಸ್ಥಿತರಿದ್ದರು.




