ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ವತಿಯಿಂದ ಭಾನುವಾರ ಜಿಲ್ಲೆಯಲ್ಲಿ ನಡೆದ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಸುಸೂತ್ರವಾಗಿ ನಡೆಯುವಂತೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿತ್ತು.ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಆನಂದ್.ಕೆ ಅವರು ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆ ಹಾಗೂ ಪ್ರಕ್ರಿಯೆಯನ್ನು ಪರಿಶೀಲಿಸಿದರು.
ವಿಜಯಪುರ ನಗರದ ಹೇಮರೆಡ್ಡಿ ಮಲ್ಲಮ್ಮ ಶಾಲೆ ಮತ್ತು ಸಿಕ್ಯಾಬ್ ಪದವಿ ಪೂರ್ವ ಮಹಾವಿದ್ಯಾಲಯದ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಅವರು, ಅಭ್ಯರ್ಥಿಗಳ ಹಾಜರಾತಿ, ತಪಾಸಣೆ ಪ್ರಕ್ರಿಯೆ, ಪರೀಕ್ಷಾ ಕೊಠಡಿಗಳ ಸಿದ್ಧತೆ ಹಾಗೂ ಮೂಲಸೌಕರ್ಯ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಜಿಲ್ಲೆಯಾದ್ಯಂತ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಲಾಗಿತ್ತು. ಪರೀಕ್ಷಾ ಕೇಂದ್ರಗಳಲ್ಲಿ ಪ್ರಿಸ್ಕಿಂಗ್ ವ್ಯವಸ್ಥೆ, ಮುಖ ಗುರುತಿಸುವಿಕೆ ಮೂಲಕ ಹಾಜರಾತಿ ದೃಢೀಕರಣ, ಸಿಸಿಟಿವಿ ಕ್ಯಾಮೆರಾಗಳ ಕಾರ್ಯನಿರ್ವಹಣೆ ಹಾಗೂ ಜಾಮರ್ ವ್ಯವಸ್ಥೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.
ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷೆಯ ಪ್ರತಿಯೊಂದು ಹಂತದಲ್ಲಿಯೂ ನಿಗದಿತ ನಿಯಮಗಳನ್ನು ಪಾಲಿಸಿ, ಯಾವುದೇ ಲೋಪದೋಷಗಳಿಗೆ ಅವಕಾಶ ನೀಡಬಾರದು. ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು, ಪಾರದರ್ಶಕತೆ ಹಾಗೂ ಅಗತ್ಯ ಮೇಲ್ವಿಚಾರಣೆ ಕಾಪಾಡಬೇಕು ಎಂದು ನಿರ್ದೇಶನ ನೀಡಿದರು.
ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಡಚಣೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ, ಎಲ್ಲ ವ್ಯವಸ್ಥೆಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.ಈ ಸಂದರ್ಭದಲ್ಲಿ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.


