ನಿರುದ್ಯೋಗ, ಭ್ರಷ್ಟಾಚಾರ, ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ಅಕ್ರಮ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಯುವಜನರು ಸಂಘಟಿತರಾಗಿ ಹೋರಾಟ ರೂಪಿಸಬೇಕು ಎಂದು ಎಐಡಿವೈಓ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಕರೆ ನೀಡಿದರು.
ವಿಜಯಪುರ ನಗರದ ಖೇಡ್ ಐಟಿಐ ಕಾಲೇಜಿನಲ್ಲಿ ರಾಜಸ್ಥಾನದ ಜೈಪುರದಲ್ಲಿ ನವೆಂಬರ್ 27ರಿಂದ 29ರವರೆಗೆ ನಡೆಯಲಿರುವ ಎಐಡಿವೈಓ 4ನೇ ಅಖಿಲ ಭಾರತ ಯುವಜನ ಸಮ್ಮೇಳನದ ಪೋಸ್ಟರ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇದ್ದರೂ ನೇಮಕಾತಿ ನಡೆಯುತ್ತಿಲ್ಲ. ನಡೆಯುವ ಕೆಲವೇ ನೇಮಕಾತಿಗಳಲ್ಲೂ ಪ್ರಶ್ನೆಪತ್ರಿಕೆ ಸೋರಿಕೆ, ಭ್ರಷ್ಟಾಚಾರ ಹಾಗೂ ಸ್ವಜನಪಕ್ಷಪಾತದಿಂದ ಯುವಜನರಿಗೆ ಅನ್ಯಾಯವಾಗುತ್ತಿದೆ. ರಾಜ್ಯದಲ್ಲಿ 72 ಸಾವಿರ ಹುದ್ದೆಗಳ ಭರ್ತಿಗೆ ಸರ್ಕಾರ ಘೋಷಣೆ ಮಾಡಿದ್ದು, ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿ ಹಾಗೂ ಕಾಲಮಿತಿಯಲ್ಲಿ ಪೂರ್ಣಗೊಳ್ಳಬೇಕು ಎಂದು ಆಗ್ರಹಿಸಿದರು.
ದೇಶದಲ್ಲಿ ಮಹಿಳೆಯರು ಮತ್ತು ಬಾಲಕಿಯರ ಮೇಲಿನ ದೌರ್ಜನ್ಯ, ಮಾದಕ ವ್ಯಸನ, ಆನ್‌ಲೈನ್ ಬೆಟ್ಟಿಂಗ್ ಹಾಗೂ ಅಶ್ಲೀಲತೆಯಂತಹ ಸಮಸ್ಯೆಗಳು ಹೆಚ್ಚುತ್ತಿವೆ. ಇವುಗಳ ವಿರುದ್ಧ ವೈಜ್ಞಾನಿಕ ಚಿಂತನೆ, ಉನ್ನತ ಸಂಸ್ಕೃತಿ ಮತ್ತು ನೈತಿಕ ಮೌಲ್ಯಗಳ ಆಧಾರದಲ್ಲಿ ಬಲಿಷ್ಠ ಯುವಜನ ಚಳವಳಿ ಕಟ್ಟುವ ಅಗತ್ಯವಿದೆ ಎಂದರು.ಭಗತ್‌ಸಿಂಗ್, ಚಂದ್ರಶೇಖರ್ ಆಜಾದ್, ಸುಭಾಷ್ ಚಂದ್ರ ಬೋಸ್ ಸೇರಿದಂತೆ ಕ್ರಾಂತಿಕಾರಿಗಳ ಆದರ್ಶಗಳಿಂದ ಪ್ರೇರಣೆ ಪಡೆದು ಯುವಜನರ ಸಮಸ್ಯೆಗಳ ವಿರುದ್ಧ ದೇಶವ್ಯಾಪಿ ಹೋರಾಟ ಬಲಪಡಿಸುವ ಉದ್ದೇಶದಿಂದ ಜೈಪುರದಲ್ಲಿ ಸಮ್ಮೇಳನ ಆಯೋಜಿಸಲಾಗಿದೆ. ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಎಐಡಿವೈಓ ಜಿಲ್ಲಾ ಅಧ್ಯಕ್ಷ ಶ್ರೀಕಾಂತ ಕೊಂಡಗೂಳಿ, ವಿದ್ಯಾರ್ಥಿಗಳಾದ ಲಕ್ಷ್ಮಣ ಮಾನೆ, ಅಭಿಷೇಕ ಗೌಡಗಾವಿ ಸೇರಿದಂತೆ ಹಲವು ಯುವಕರು ಉಪಸ್ಥಿತರಿದ್ದರು.



