ಶಿಕ್ಷಣವೆಂಬ ಅಸ್ತ್ರದಿಂದ ಮಾತ್ರ ಸಮಾಜದಲ್ಲಿ ಸಮಾನತೆ ಮತ್ತು ಬದಲಾವಣೆ ತರಲು ಸಾಧ್ಯ. ಅದರಲ್ಲೂ ಮಹಿಳಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಮರ್ಥ, ಪ್ರಬುದ್ಧ ಹಾಗೂ ಜ್ಞಾನವಂತ ಸಮಾಜ ನಿರ್ಮಿಸಲು ಸಾಧ್ಯ ಎಂದು ಪ್ರೊ. ವಿ.ವಿ. ಮಳಗಿ ಪ್ರತಿಪಾದಿಸಿದರು.
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜಯಂತಿ ಅಂಗವಾಗಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾಗಿದ್ದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಕೇವಲ 13ನೇ ವಯಸ್ಸಿನಲ್ಲಿಯೇ ಹತ್ತು ಭಾಷೆಗಳಲ್ಲಿ ಪಾಂಡಿತ್ಯ ಹೊಂದಿದ್ದ ಅವರು ಮನೆಯಲ್ಲಿಯೇ ಶಿಕ್ಷಣ ಆರಂಭಿಸಿದ್ದರು. ಪತ್ರಿಕೋದ್ಯಮದಲ್ಲಿಯೂ ಆಸಕ್ತಿ ಹೊಂದಿದ್ದ ಅವರು ‘ಆಜಾದ್’ ಮತ್ತು ‘ಅಲ್ ಬಿಲಾಲ್’ ಪತ್ರಿಕೆಗಳನ್ನು ಆರಂಭಿಸಿದ್ದರು ಎಂದು ಸ್ಮರಿಸಿದರು.
ಭಾರತ ರತ್ನ ಪ್ರಶಸ್ತಿ ಪುರಸ್ಕೃತರಾದ ಆಜಾದ್ ಅವರು ಶಿಕ್ಷಣವನ್ನು ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿ ಪರಿಗಣಿಸಿದ್ದರು. 6ರಿಂದ 14 ವರ್ಷದ ಮಕ್ಕಳಿಗೆ ಉಚಿತ ಶಿಕ್ಷಣ ಒದಗಿಸುವ ಆಶಯ ಹೊಂದಿದ್ದ ಅವರು, ಸಾಕ್ಷರತೆ ಹೆಚ್ಚಿಸುವ ನಿಟ್ಟಿನಲ್ಲಿ ವಯಸ್ಕರ ಶಿಕ್ಷಣಕ್ಕೂ ಪ್ರೋತ್ಸಾಹ ನೀಡಿದ್ದರು. ಉನ್ನತ ಶಿಕ್ಷಣ, ವಿಶ್ವವಿದ್ಯಾಲಯಗಳು ಸಂಶೋಧನಾ ಕೇಂದ್ರಗಳು ಹಾಗೂ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಅಗತ್ಯ ಆರ್ಥಿಕ ನೆರವು ದೊರಕಿಸುವಲ್ಲಿಯೂ ಮಹತ್ವದ ಪಾತ್ರ ವಹಿಸಿದ್ದರು ಎಂದು ವಿವರಿಸಿದರು.
ಮಹಿಳೆಯರು ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಬೇಕು. ಮಹಿಳೆಯರ ಶಿಕ್ಷಣ ಕೇವಲ ಒಬ್ಬ ವ್ಯಕ್ತಿಯ ಅಥವಾ ಕುಟುಂಬದ ಬೆಳವಣಿಗೆಗೆ ಸೀಮಿತವಾಗಿಲ್ಲ. ಅದು ಮುಂದಿನ ಪೀಳಿಗೆಯ ಭವಿಷ್ಯ ರೂಪಿಸುವ ಶಕ್ತಿಯಾಗಿದೆ. ಹೀಗಾಗಿ ಪುರುಷರ ಶಿಕ್ಷಣಕ್ಕೆ ನೀಡುವಷ್ಟೇ ಆದ್ಯತೆಯನ್ನು ಮಹಿಳೆಯರ ಶಿಕ್ಷಣಕ್ಕೂ ನೀಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮಾತನಾಡಿದರು.
ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕಿ ಡಾ. ರೂಪಾ, ಪ್ರೊ. ಜ್ಯೋತಿ ಉಪಾಧ್ಯೆ ಸ್ವಾಗತಿಸಿದರು. ನಾಯ್ಕೋಡಿ ನಿರೂಪಿಸಿದರು. ಡಾ. ಸೌಭಾಗ್ಯ ವಂದಿಸಿದರು.




