ಮಹರ್ಷಿ ವಾಲ್ಮೀಕಿ ಅವರು ರಾಮಾಯಣದ ಮೂಲಕ ಭಾರತೀಯ ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಗೆ ಅಪಾರ ಕೊಡುಗೆ ನೀಡಿದ್ದು, ಸತ್ಯ, ಧರ್ಮ, ತ್ಯಾಗ, ಸಹೋದರತ್ವ ಮತ್ತು ಮಾನವೀಯ ಮೌಲ್ಯಗಳ ಸಂದೇಶವನ್ನು ವಿಶ್ವಕ್ಕೆ ಸಾರಿದ್ದಾರೆ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕಧೊಂಡ ಹೇಳಿದರು.
ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಹನೀಯರ ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗದೆ, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರೇರಣೆಯಾಗಬೇಕು. ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಸಮಾನತೆ, ಸೌಹಾರ್ದತೆ ಹಾಗೂ ಪರಸ್ಪರ ಗೌರವದ ಮನೋಭಾವ ಬೆಳೆಸಲು ಪೂರಕವಾಗಿವೆ ಎಂದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ವಿದ್ಯಾರ್ಥಿಗಳು ಶಿಕ್ಷಣ, ಜ್ಞಾನ, ಶ್ರದ್ಧೆ ಹಾಗೂ ಪರಿಶ್ರಮದ ಮೂಲಕ ಜೀವನದಲ್ಲಿ ಸಾಧನೆ ಮಾಡಬೇಕು. ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳನ್ನು ಅನುಸರಿಸಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಏಕಲವ್ಯನ ಕಥೆಯಾಧಾರಿತ ಗೊಂಬೆ ನಾಟಕ ಪ್ರದರ್ಶಿಸಲಾಯಿತು. ವಿವಿಧ ವೇಷಭೂಷಣ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳು, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ಮಹರ್ಷಿ ವಾಲ್ಮೀಕಿ ರಾಜ್ಯ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ, ಉಪವಿಭಾಗಾಧಿಕಾರಿ ಜುಫಿಶಾನ್ ಹಕ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.






