ವಸತಿ ನಿಲಯ ಹೊರಗುತ್ತಿಗೆ ಕಾರ್ಮಿಕರಿಗೆ ಸರ್ಕಾರ ಘೋಷಿಸಿರುವ ಪರಿಷ್ಕೃತ ವೇತನವನ್ನು ತಕ್ಷಣದಿಂದಲೇ ಜಾರಿಗೆ ತಂದು ಪಾವತಿಸಬೇಕು. ಪ್ರತಿ ತಿಂಗಳ ವೇತನವನ್ನು ನಿಗದಿತ ಅವಧಿಯೊಳಗೆ ಪಾವತಿಸುವ ವ್ಯವಸ್ಥೆ ಮಾಡಬೇಕು ಎಂದು ಸಂಘದ ರಾಜ್ಯ ಖಜಾಂಚಿ ಹಾಗೂ ಎಐಯುಟಿಯುಸಿ ಕಾರ್ಮಿಕ ಸಂಘಟನೆ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಹೆಚ್ ಟಿ ಆಗ್ರಹಿಸಿದರು.
ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ವಿಜಯಪುರ ಜಿಲ್ಲಾ ಸಮಿತಿಯಿಂದ ಜಿಲ್ಲಾ ಪಂಚಾಯತ್ ಕಚೇರಿ ಎದುರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು. ಬಳಿಕ ಹೊರಗುತ್ತಿಗೆ ವಸತಿ ನಿಲಯ ಕಾರ್ಮಿಕರ ವಿವಿಧ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ವಿಜಯಪುರ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.
ಇದೇ ವೇಳೆಮ “ಬಸವನ ಬಾಗೇವಾಡಿ ನಗರದಲ್ಲಿ ಯಾವುದೇ ತಪ್ಪು ಮಾಡದಿದ್ದರೂ ಸೇವೆಯಿಂದ ವಜಾಗೊಂಡಿರುವ ಏಳು ಮಂದಿ ಹೊರಗುತ್ತಿಗೆ ಕಾರ್ಮಿಕರನ್ನು ಕೂಡಲೇ ಮರುನೇಮಕ ಮಾಡಬೇಕು” ಎಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ, ಕಾರ್ಮಿಕರ ಬೇಡಿಕೆಗಳ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಒ) ಅವರೊಂದಿಗೆ ಸಭೆ ನಡೆಸಿ, ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಇದನ್ನೂ ಓದಿದ್ದೀರಾ? ಹಾಸನ | ನೀಟ್ ವಿದ್ಯಾರ್ಥಿಗಳ ಬೇಡಿಕೆ ಈಡೇರದಿದ್ದರೆ ಇನ್ನೂ ದೊಡ್ಡಮಟ್ಟದ ಪ್ರತಿಭಟನೆ: ಎಸ್‌ಎಫ್‌ಐ ಎಚ್ಚರಿಕೆ
ಕಾರ್ಮಿಕರ ನ್ಯಾಯಸಮ್ಮತ ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಕಾಶಿಭಾಯಿ ಜನಗೂಂಡ, ಜಿಲ್ಲಾ ಕಾರ್ಯದರ್ಶಿ ರಜನಿ, ಮಲ್ಲಮ್ಮ, ಪಾರ್ವತಿ ಸುವರ್ಣ, ಗಂಗಾ ಹಲಗಿ ಸೇರಿದಂತೆ ಹಲವು ಕಾರ್ಮಿಕರು ಹಾಗೂ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.





