`ವಿಬಿ-ಜಿ ರಾಮ್ ಜಿ’ ಯೋಜನೆಯಡಿ ಕೆರೆ, ನಾಲೆ ಹಾಗೂ ಕಾಲುವೆಗಳ ಹೂಳೆತ್ತುವ ಕಾಮಗಾರಿಗಳು, ₹5 ಲಕ್ಷದೊಳಗಿನ ಕಾಮಗಾರಿಗಳಿಗೆ ಟೆಂಡರ್ ವಿನಾಯಿತಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸ್ಪಷ್ಟ ಮಾರ್ಗಸೂಚಿ ನೀಡುವಂತೆ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಬಿ-ಗ್ರೇಡ್) ಹುದ್ದೆ ಉನ್ನತೀಕರಣ ಸಂಘ (ರಿ), ವಿಜಯಪುರ, ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದೆ.
ಸಂಘದ ರಾಜ್ಯಾಧ್ಯಕ್ಷ ರಮೇಶ ನಡಗೇರಿ ಮಾತನಾಡಿ, “ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ನಿಯಮಾವಳಿಗಳಲ್ಲಿ ಸ್ಪಷ್ಟತೆ ಇಲ್ಲದಿರುವುದರಿಂದ ವಿಜಯಪುರ ಜಿಲ್ಲೆಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ಕಾಮಗಾರಿಗಳನ್ನು ಆರಂಭಿಸುವಲ್ಲಿ ಆಡಳಿತಾತ್ಮಕ ಗೊಂದಲ ಉಂಟಾಗಿದ್ದು, ಗ್ರಾಮ ಪಂಚಾಯಿತಿ ಮಟ್ಟದ ಅಭಿವೃದ್ಧಿ ಕಾರ್ಯಗಳು ವಿಳಂಬವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಅನ್ವಯಿಸುವಂತೆ ಅಧಿಕೃತ ಸ್ಪಷ್ಟೀಕರಣ ಹಾಗೂ ಮಾರ್ಗಸೂಚಿ ಸುತ್ತೋಲೆ ಹೊರಡಿಸುವಂತೆ ಸಂಘವು ಒತ್ತಾಯಿಸಿದೆ” ಎಂದರು.
ಮೂರು ವಿಷಯಗಳ ಕುರಿತು ಸ್ಪಷ್ಟನೆ ನೀಡುವಂತೆ ಕೋರಲಾಗಿದ್ದು,” ‘ವಿಬಿ-ಜಿ ರಾಮ್ ಜಿ’ ಯೋಜನೆಯಡಿ ಕೆರೆ, ನಾಲೆ ಹಾಗೂ ಕಾಲುವೆಗಳ ಹೂಳೆತ್ತುವ ಕಾಮಗಾರಿಗಳು ಅನುಮೋದಿತ ಕಾಮಗಾರಿಗಳ ವ್ಯಾಪ್ತಿಗೆ ಒಳಪಡುತ್ತವೆಯೇ ಎಂಬುದನ್ನು ಸ್ಪಷ್ಟಪಡಿಸಿ, ಜಿಲ್ಲಾ ಪಂಚಾಯಿತಿಯಿಂದ ಅಗತ್ಯ ಅನುಮತಿ ನೀಡಬೇಕು” ಎಂದು ಆಗ್ರಹಿಸಿದರು.
ಅದೇ ರೀತಿ ₹5 ಲಕ್ಷದೊಳಗಿನ ಸಣ್ಣ ಹಾಗೂ ತುರ್ತು ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆಯಿಂದ ವಿನಾಯಿತಿ ನೀಡಿ, ಸಾರ್ವಜನಿಕ ತುರ್ತು ಸಂದರ್ಭಗಳಲ್ಲಿ ತಕ್ಷಣ ಕಾಮಗಾರಿ ಆರಂಭಿಸಲು ಅವಕಾಶ ಕಲ್ಪಿಸುವ ಮಾರ್ಗಸೂಚಿ ಹೊರಡಿಸಬೇಕು ಎಂದು ಮನವಿ ಮಾಡಿದರು.
ಇದಲ್ಲದೆ, ಯೋಜನೆಯ ಅನುಮೋದಿತ ಪಟ್ಟಿಯಲ್ಲಿಲ್ಲದಿದ್ದರೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ಯಗತ್ಯ ಸಾರ್ವಜನಿಕ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯ ಅನುಮೋದನೆ ಹಾಗೂ ಸ್ಪಷ್ಟ ಮಾರ್ಗಸೂಚಿ ನೀಡುವಂತೆಯೂ ಕೋರಿದರು.
ಈ ಕುರಿತು ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆ ಶೀಘ್ರದಲ್ಲೇ ಸ್ಪಷ್ಟೀಕರಣ ಸುತ್ತೋಲೆ ಹೊರಡಿಸಿದರೆ ಜಿಲ್ಲೆಯ ಎಲ್ಲಾ ಪಿಡಿಒಗಳು ನಿಯಮಾನುಸಾರ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬವಿಲ್ಲದೆ ಆರಂಭಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದರು. ಈ ವೇಳೆ ಪಿಡಿಒ ಸಂತೋಷ್ ಮತ್ತು ಸುರೇಶ್ ಇದ್ದರು.





