ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ನದಿಗಳು ಹಾಗೂ ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು, ಮುಂಬರುವ ಬೇಸಿಗೆಯಲ್ಲಿ ವಿಜಯಪುರ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಈಗಿನಿಂದಲೇ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಮೇಯರ್ ಮಡಿವಾಳಪ್ಪ ಕರಡಿ ಸೂಚಿಸಿದರು.
ವಿಜಯಪುರ ನಗರದ ಕುಡಿಯುವ ನೀರು, ಸ್ವಚ್ಛತೆ ಹಾಗೂ ಬೀದಿ ದೀಪಗಳ ನಿರ್ವಹಣೆ ಕುರಿತು ನ.24ರಂದು ಮಹಾನಗರಪಾಲಿಕೆ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಜಲಮಂಡಳಿ ಅಧಿಕಾರಿಗಳು ವಾರ್ಡ್‌ಗಳನ್ನು ಉಪವಲಯಗಳಾಗಿ ವಿಂಗಡಿಸಿ ಹಗಲು ವೇಳೆಯಲ್ಲಿ ನಿಯಮಿತ ನೀರು ಪೂರೈಸಲು ವ್ಯವಸ್ಥೆ ಮಾಡಬೇಕು ಎಂದರು.
ಪೈಪ್‌ಲೈನ್ ಸೋರಿಕೆ ಹಾಗೂ ಹಾಳಾದ ಪೈಪ್‌ಗಳನ್ನು ತಕ್ಷಣ ದುರಸ್ತಿಗೊಳಿಸಬೇಕು. ನಗರದಲ್ಲಿರುವ ಬಾವಿಗಳನ್ನು ಸ್ವಚ್ಛಗೊಳಿಸಿ ಮೋಟಾರ್ ಪಂಪ್‌ಗಳನ್ನು ಅಳವಡಿಸುವ ಮೂಲಕ ಗೃಹಬಳಕೆಗೆ ನೀರು ಒದಗಿಸಬೇಕು. ಭೂತನಾಳ ಕೆರೆ ಭರ್ತಿ ಯೋಜನೆಗೆ ಶೀಘ್ರ ಅನುಮೋದನೆ ಪಡೆದು ಅನುಷ್ಠಾನಕ್ಕೆ ಅಧಿಕಾರಿಗಳು ಪ್ರಯತ್ನಿಸಬೇಕು ಎಂದು ನಿರ್ದೇಶನ ನೀಡಿದರು.
ನೀರಿನ ಅನಗತ್ಯ ಪೋಲು ತಡೆಯಲು ಪಾಲಿಕೆ ಹಾಗೂ ಜಲಮಂಡಳಿ ಅಧಿಕಾರಿಗಳ ತಂಡ ರಚಿಸಿ, ನೀರು ವ್ಯರ್ಥ ಮಾಡುವವರಿಗೆ ದಂಡ ವಿಧಿಸುವ ಕುರಿತು ಮುಂದಿನ ಸಾಮಾನ್ಯ ಸಭೆಯಲ್ಲಿ ಠರಾವು ಕೈಗೊಳ್ಳಲಾಗುವುದು. ಅಧಿಕಾರಿಗಳು ಹಾಗೂ ವಾಲ್ವ್‌ಮನ್‌ಗಳು ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಸೂಚಿಸಿದರು.
ನಗರದ ಎಲ್ಲ ವಾರ್ಡ್‌ಗಳಲ್ಲಿ ಪ್ರತಿದಿನ ಕಸ ಸಂಗ್ರಹಣೆ, ಚರಂಡಿ ಸ್ವಚ್ಛತೆ ಹಾಗೂ ಸಾರ್ವಜನಿಕ ಸ್ಥಳಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕಾರ್ಯನಿರ್ವಹಿಸದ ಬೀದಿ ದೀಪಗಳನ್ನು ತಕ್ಷಣ ದುರಸ್ತಿಗೊಳಿಸಿ, ಸಾರ್ವಜನಿಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದರು.
ನಗರದ ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ನಿರ್ಲಕ್ಷಿಸದೆ ಸದಸ್ಯರು ಹಾಗೂ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಮೇಯರ್ ತಿಳಿಸಿದರು.



