ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ ₹25,000 ಪರಿಹಾರ ನೀಡಬೇಕು ಎಂದು ಭೀಮ್ ರಾಜ್ಯ ದಲಿತ ಸೇವಾ ಸಮಿತಿ (ರಿ.), ಬೆಂಗಳೂರು ಸಂಘಟನೆಯ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ನೀಲಾಂಬಿಕಾ ಕಟ್ಟಿಮನಿ ಹಾಗೂ ರಾಜ್ಯ ಅಲ್ಪಸಂಖ್ಯಾತರ ಮಹಿಳಾ ಘಟಕದ ಅಧ್ಯಕ್ಷೆ ಸಲ್ಮಾ ಮೈರಾಗೋಳ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ರೈತರು ಬೀಜ, ಗೊಬ್ಬರ, ಔಷಧಿ ಹಾಗೂ ಕೃಷಿ ಕಾರ್ಮಿಕರಿಗಾಗಿ ಹೆಚ್ಚಿನ ಹಣ ಖರ್ಚು ಮಾಡಿದ್ದು, ಬೆಳೆ ನಷ್ಟದಿಂದ ಸಾಲದ ಸುಳಿಗೆ ಸಿಲುಕಿದ್ದಾರೆ. ಆದ್ದರಿಂದ ಬೆಳೆ ನಷ್ಟದ ಪಾರದರ್ಶಕ ಸಮೀಕ್ಷೆ ನಡೆಸಿ, ಅರ್ಹ ರೈತರಿಗೆ ಹೆಚ್ಚುವರಿ ಪರಿಹಾರ ನೀಡಬೇಕು. ಸಣ್ಣ ಮತ್ತು ಅತಿಸಣ್ಣ ರೈತರಿಗೆ ಆದ್ಯತೆ ನೀಡಿ, ಪರಿಹಾರದ ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಕುರಿತು ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ, ರೈತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಲಾಗುವುದು. ಸರ್ಕಾರ ತಕ್ಷಣ ಸ್ಪಂದಿಸದಿದ್ದರೆ ರೈತರ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕ ಹೋರಾಟ ಮುಂದುವರಿಸಲಾಗುವುದು ಎಂದು ಮುಖಂಡರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ಅಪ್ಪುರಾಜ್ ನಿಮಾದಾರ, ರಾಜ್ಯ ಉಪಾಧ್ಯಕ್ಷರಾದ ವಿಜಯಕುಮಾರ ನಿಮಾದಾರ, ಮಲ್ಲಿಕಾರ್ಜುನ ಬೂತನಾಳ, ವಿವಿಧ ರಾಜ್ಯ ಹಾಗೂ ಜಿಲ್ಲಾ ಘಟಕಗಳ ಪದಾಧಿಕಾರಿಗಳು ಮತ್ತು ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.






