ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳ ದಿನಾಂಕ ಮತ್ತು ಮತದಾರರ ಪಟ್ಟಿ ಕುರಿತು ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗ ಕೂಡಲೇ ಸ್ಪಷ್ಟನೆ ನೀಡಬೇಕು ಎಂದು ಗ್ರಾಮ ಸ್ವರಾಜ್ಯ ಕರ್ನಾಟಕದ ರಾಜ್ಯ ಉಪಾಧ್ಯಕ್ಷ ಪ್ರದೀಪ್ ಚ. ಪಾಟೀಲ್ ನಾಗರದಿನ್ನಿ ಆಗ್ರಹಿಸಿದ್ದಾರೆ.
ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಂಡ ಮತದಾರರ ಪಟ್ಟಿಯನ್ನೇ ಬಳಸಬೇಕೇ ಅಥವಾ ಹಳೆಯ ಪಟ್ಟಿಯ ಆಧಾರದ ಮೇಲೆ ಚುನಾವಣೆ ನಡೆಸಬೇಕೇ ಎಂಬ ಗೊಂದಲ ಮುಂದುವರಿದಿದೆ. ಮೀಸಲಾತಿ ಅಂತಿಮ ಪಟ್ಟಿಯೂ ಪ್ರಕಟವಾಗಿಲ್ಲ. ಈ ಎಲ್ಲ ಅನಿಶ್ಚಿತತೆ ನಿವಾರಿಸಿ ಚುನಾವಣಾ ದಿನಾಂಕವನ್ನು ಶೀಘ್ರ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.
ಚುನಾವಣೆ ವಿಳಂಬದಿಂದ ಒಂದು ಲಕ್ಷಕ್ಕೂ ಅಧಿಕ ಆಕಾಂಕ್ಷಿಗಳು ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಾಗುವ ಅವಕಾಶದಿಂದ ವಂಚಿತರಾಗಿದ್ದಾರೆ. ಮೂರು ಕೋಟಿಗೂ ಅಧಿಕ ಮತದಾರರಿಗೂ ಮತದಾನದ ಹಕ್ಕು ಚಲಾಯಿಸಲು ಸಾಧ್ಯವಾಗುತ್ತಿಲ್ಲ. ಇದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಶಾಸಕರು ಸ್ಥಳೀಯ ಸಂಸ್ಥೆಗಳ ಚುನಾವಣೆ, ಗ್ರಾಮೀಣ ಅಭಿವೃದ್ಧಿ ಹಾಗೂ ಬರಗಾಲದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಬೇಕು. ಗ್ರಾಮಗಳ ಅಭಿವೃದ್ಧಿಗೆ ಬರಬೇಕಾದ ₹3,000 ಕೋಟಿಗೂ ಅಧಿಕ ಕೇಂದ್ರ ಅನುದಾನ ಬಿಡುಗಡೆಯಾಗದಿರುವ ಬಗ್ಗೆಯೂ ಸರ್ಕಾರ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.
ಅಕ್ಟೋಬರ್ 19ರಂದು ಆಕ್ಷೇಪಣೆ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಎರಡು ಸಾವಿರಕ್ಕೂ ಅಧಿಕ ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಅವುಗಳನ್ನು ತ್ವರಿತವಾಗಿ ಪರಿಶೀಲಿಸಿ, ಸಮಸ್ಯೆ ಪರಿಹರಿಸಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಿಸಬೇಕು ಎಂದು ಪ್ರದೀಪ್ ಚ. ಪಾಟೀಲ್ ನಾಗರದಿನ್ನಿ ಒತ್ತಾಯಿಸಿದ್ದಾರೆ.




