ಆಧುನಿಕ ಜೀವನಶೈಲಿ, ಒತ್ತಡ, ಅನಿಯಮಿತ ಆಹಾರ ಪದ್ಧತಿ ಹಾಗೂ ನಿದ್ರೆಯ ಕೊರತೆಯಿಂದ ಯುವಜನರಲ್ಲಿಯೇ ಮೆದುಳು ಸಂಬಂಧಿತ ಕಾಯಿಲೆಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಜ್ಞರು ಕರೆ ನೀಡಿದ್ದಾರೆ.
ವಿಶ್ವ ಮೆದುಳು ದಿನಾಚರಣೆ ಅಂಗವಾಗಿ ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ಮೆದುಳು ಆರೋಗ್ಯ ಯೋಜನೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾಸ್ಪತ್ರೆಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮವು ಜಿಲ್ಲೆಯ ಜನರಿಗೆ ಮಹತ್ವದ ಯೋಜನೆಯಾಗಿದ್ದು, ನರರೋಗ ಸಂಬಂಧಿತ ಸಮಸ್ಯೆಗಳಿಗೆ ಜಿಲ್ಲಾಸ್ಪತ್ರೆಯಲ್ಲೇ ತಜ್ಞರ ಚಿಕಿತ್ಸೆ ಮತ್ತು ಸಲಹೆ ಲಭ್ಯವಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಲ್ಲನಗೌಡ ಬಿರಾದಾರ ಮಾತನಾಡಿ, “ಹಿಂದೆ 60–65 ವರ್ಷದ ಬಳಿಕ ಕಾಣಿಸಿಕೊಳ್ಳುತ್ತಿದ್ದ ಮೆದುಳು ಸಂಬಂಧಿತ ಕಾಯಿಲೆಗಳು ಇಂದು 20–25 ವರ್ಷದ ಯುವಜನರಲ್ಲಿಯೇ ಕಾಣಿಸಿಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಬದಲಾಗಿರುವ ಜೀವನಶೈಲಿಯೇ ಇದಕ್ಕೆ ಪ್ರಮುಖ ಕಾರಣವಾಗಿದ್ದು, ಆರೋಗ್ಯಕರ ಬದುಕಿನತ್ತ ಎಲ್ಲರೂ ಗಮನ ಹರಿಸಬೇಕು” ಎಂದು ಸಲಹೆ ನೀಡಿದರು.
ನರರೋಗ ತಜ್ಞ ಡಾ. ವಿರುಪಾಕ್ಷಪ್ಪ ಬಿರಾದಾರ ಮಾತನಾಡಿ, “ಪ್ರತಿಯೊಬ್ಬರೂ ದಿನಕ್ಕೆ ಕನಿಷ್ಠ 7ರಿಂದ 8 ಗಂಟೆಗಳ ಕಾಲ ನಿದ್ರೆ ಮಾಡಬೇಕು. ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ ಹಾಗೂ ಉತ್ತಮ ಜೀವನಶೈಲಿ ರೂಢಿಸಿಕೊಂಡರೆ ಮೆದುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಹೇಳಿದರು.
ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ಅರ್ಚನಾ ಕುಲಕರ್ಣಿ ಮಾತನಾಡಿ, “ಮಾನಸಿಕ ಒತ್ತಡವನ್ನು ನಿಯಂತ್ರಿಸಿ ಸಕಾರಾತ್ಮಕ ಚಿಂತನೆ ಬೆಳೆಸಿಕೊಳ್ಳುವುದು ಮೆದುಳಿನ ಆರೋಗ್ಯಕ್ಕೆ ಅತ್ಯಂತ ಅಗತ್ಯವಾಗಿದೆ” ಎಂದು ತಿಳಿಸಿದರು.
ಇದನ್ನೂ ಓದಿದ್ದೀರಾ? ಚಿಕ್ಕಮಗಳೂರು | ವಕೀಲೆಗೆ ಸಾಮಾಜಿಕ ಜಾಲತಾಣದಲ್ಲಿ ನಿಂದನೆ; ಕಠಿಣ ಕಾನೂನು ಕ್ರಮಕ್ಕೆ ಆಗ್ರಹ
ಮನೋರೋಗ ತಜ್ಞ ಡಾ. ಮಂಜುನಾಥ ಮಸಳಿ ಮಾತನಾಡಿ, “ನರ್ಸಿಂಗ್ ವಿದ್ಯಾರ್ಥಿಗಳು ಮೆದುಳು ಆರೋಗ್ಯದ ಬಗ್ಗೆ ಹೆಚ್ಚಿನ ಅರಿವು ಹೊಂದಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ರೋಗಿಗಳೊಂದಿಗೆ ಹೆಚ್ಚು ಸಮಯ ಕಳೆಯುವ ನರ್ಸಿಂಗ್ ಸಿಬ್ಬಂದಿ ಆರೋಗ್ಯ ಶಿಕ್ಷಣದಲ್ಲಿ ಪ್ರಮುಖ ಪಾತ್ರವಹಿಸಬಹುದು” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಸ್ಪತ್ರೆಯ ಆರ್‌ಎಂಒ ಡಾ. ಕೆ.ಡಿ. ಗುಂಡಬಾವಡಿ, ಡಾ. ಮಹೇಶ ಮೋರೆ, ಡಾ. ದೇವಮಾನೆ, ಡಾ. ಮಂಜುನಾಥ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ. ಕೋಲೂರ, ಜಿಲ್ಲಾ ಸಂಯೋಜಕ ಆನಂದ ರಾಠೋಡ, ಜಿಲ್ಲಾಸ್ಪತ್ರೆಯ ಸಿಬ್ಬಂದಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಸಿಬ್ಬಂದಿ ಹಾಗೂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ರವಿ ಕಿತ್ತೂರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.





