ಗ್ರಾಮೀಣ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ, ಸಂಶೋಧನಾ ಪ್ರವೃತ್ತಿ ಹಾಗೂ ಸೃಜನಶೀಲತೆ ಬೆಳೆಸಲು ವಿಜ್ಞಾನಜಾತ್ರೆಗಳು ಉತ್ತಮ ವೇದಿಕೆಯಾಗಿವೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ವಿಜಯಪುರ ಜಿಲ್ಲೆಯ ತಿಕೋಟಾದ ಎ.ಬಿ. ಜತ್ತಿ ಶಾಲೆ ಆವರಣದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮಕ್ಕಳ ವಿಜ್ಞಾನಜಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸುಮಾರು ₹4,500 ಕೋಟಿ ವೆಚ್ಚ ಮಾಡುವ ಉದ್ದೇಶವಿದೆ. ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಸೂರಿನಡಿ ಶಿಕ್ಷಣ, ಉಚಿತ ಬಸ್ ಸೌಲಭ್ಯ, ಕಂಪ್ಯೂಟರ್ ಶಿಕ್ಷಣ, ವಿಜ್ಞಾನ ಪ್ರಯೋಗಾಲಯ, ಕೃತಕ ಬುದ್ಧಿಮತ್ತೆ ಹಾಗೂ ಕೌಶಲ್ಯಾಭಿವೃದ್ಧಿ ತರಬೇತಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ರಾಜ್ಯದ 45 ಲಕ್ಷ ಮಕ್ಕಳಿಗೆ ಬಿಸಿಯೂಟದ ಜತೆಗೆ ಮೊಟ್ಟೆ ಅಥವಾ ಬಾಳೆಹಣ್ಣು ವಿತರಿಸಲಾಗುತ್ತಿದೆ. ಮಕ್ಕಳ ಪೌಷ್ಟಿಕತೆ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಸರ್ಕಾರ ಬದ್ಧವಾಗಿದೆ ಎಂದರು.
ಸಚಿವ ಡಾ. ಎಂ.ಬಿ. ಪಾಟೀಲ ಮಾತನಾಡಿ, ಬಡ ರೈತರು ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಬಬಲೇಶ್ವರ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಗ್ರಾಮೀಣ ಮಕ್ಕಳ ಪ್ರತಿಭೆಗೆ ಸೂಕ್ತ ಅವಕಾಶ ಮತ್ತು ಪ್ರೋತ್ಸಾಹ ದೊರೆತರೆ ಅವರು ಉನ್ನತ ಸಾಧನೆ ಮಾಡಬಲ್ಲರು ಎಂದರು.
ನಾಗನೂರು ರುದ್ರಾಕ್ಷಿ ಮಠದ ಅಲ್ಲಮಪ್ರಭು ಸ್ವಾಮೀಜಿ ಮಾತನಾಡಿ, ಜಿಲ್ಲೆಯ ವಿದ್ಯಾರ್ಥಿಗಳು ವಿಜ್ಞಾನಿಗಳು ಹಾಗೂ ತಂತ್ರಜ್ಞಾನಿಗಳಾಗಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಗುರಿ ಹೊಂದಬೇಕು ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ವಿಠ್ಠಲ ಕಟಕಧೊಂಡ, ಜಿಲ್ಲಾಧಿಕಾರಿ ಡಾ. ಆನಂದ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



