ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ (ಪಿಜಿ) ತರಗತಿಗಳಿಗೆ ಬೋಧಕರ ಕೊರತೆ ಎದುರಾಗಿದ್ದು, ಅತಿಥಿ ಉಪನ್ಯಾಸಕರ ನೇಮಕ ವಿಳಂಬದಿಂದಾಗಿ ಪಿಎಚ್‌ಡಿ ವಿದ್ಯಾರ್ಥಿನಿಯರೇ ಕಳೆದ ಒಂದು ತಿಂಗಳಿಂದ ಪಿಜಿ ವಿದ್ಯಾರ್ಥಿನಿಯರಿಗೆ ಪಾಠ ಮಾಡುತ್ತಿರುವ ಆರೋಪ ಕೇಳಿಬಂದಿದೆ.
ಉಡುತಡಿ, ಸಿಂಧನೂರು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಬೀದರ್ ಪ್ರಾದೇಶಿಕ ಕೇಂದ್ರ ಸೇರಿದಂತೆ ವಿಶ್ವವಿದ್ಯಾಲಯದಲ್ಲಿ 80 ಪೂರ್ಣಕಾಲಿಕ ಹಾಗೂ 15 ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳು ಸೇರಿ ಒಟ್ಟು 95 ಹುದ್ದೆಗಳು ಖಾಲಿ ಇವೆ ಎನ್ನಲಾಗಿದೆ.
ಆಗಸ್ಟ್ 12ರಂದು ನಡೆದ 156ನೇ ಸಿಂಡಿಕೇಟ್ ಸಭೆಯಲ್ಲಿ ಪೂರ್ಣಕಾಲಿಕ, ಅರೆಕಾಲಿಕ ಹಾಗೂ ತಾತ್ಕಾಲಿಕ ಅತಿಥಿ ಉಪನ್ಯಾಸಕರ ನೇಮಕಕ್ಕೆ ಅನುಮೋದನೆ ನೀಡಿದ್ದರೂ, ಇದುವರೆಗೆ ನೇಮಕಾತಿ ನಡೆದಿಲ್ಲ. ಇದರಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ಹಿನ್ನಡೆಯಾಗಿದ್ದು, ವಿದ್ಯಾರ್ಥಿನಿಯರಲ್ಲಿ ಅಸಮಾಧಾನ ವ್ಯಕ್ತವಾಗಿದೆ.
‘ತರಗತಿಗಳು ಆರಂಭವಾಗಿ ತಿಂಗಳು ಕಳೆದರೂ ಪಾಠ-ಪ್ರವಚನಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಭವಿಷ್ಯದ ಬಗ್ಗೆ ಆತಂಕ ಉಂಟಾಗಿದೆ’ ಎಂದು ವಿದ್ಯಾರ್ಥಿನಿಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಿಜಿಗೆ ಸೇರ್ಪಡೆಯಾದ ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ಶುಲ್ಕ ಕಡ್ಡಾಯಗೊಳಿಸಿರುವುದರಿಂದ ಮನೆಗೆ ತೆರಳಲೂ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದ್ದಾರೆ.
ಈ ನಡುವೆ, ‘ಖಾಲಿ ಇರುವ ಬೋಧಕರ ನೇಮಕಾತಿಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದ ಅನುಮೋದನೆ ಬಳಿಕ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು’ ಎಂದು ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ತಿಳಿಸಿದ್ದಾರೆ.
ಪಿಎಚ್‌ಡಿ ವಿದ್ಯಾರ್ಥಿಗಳಿಗೆ ವಾರಕ್ಕೆ ನಾಲ್ಕು ತರಗತಿ ತೆಗೆದುಕೊಳ್ಳಲು ಅವಕಾಶವಿದ್ದು, ಪಿಜಿ ತರಗತಿಗಳು ಸುಗಮವಾಗಿ ನಡೆಯುತ್ತಿವೆ. ರಾಜ್ಯದಲ್ಲೇ ಪ್ರಥಮ ಬಾರಿಗೆ ಪಿಎಚ್‌ಡಿ ವಿದ್ಯಾರ್ಥಿನಿಯರನ್ನು ಅರೆಕಾಲಿಕ ಅತಿಥಿ ಉಪನ್ಯಾಸಕರಾಗಿ ನೇಮಕ ಮಾಡಲಾಗಿದ್ದು, ಅವರು ತರಗತಿಗಳನ್ನು ನಡೆಸುತ್ತಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.




