ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಆಗಸ್ಟ್ 8ರಂದು ಪೂರ್ಣಗೊಳ್ಳಲಿದ್ದು, ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ, ಅನರ್ಹರು ಪಟ್ಟಿಗೆ ಸೇರ್ಪಡೆಯಾಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚಿಸಿದರು.
ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
“ಆಗಸ್ಟ್ 4ರವರೆಗೆ ಜಿಲ್ಲೆಯಲ್ಲಿ ಒಟ್ಟು 16,79,495 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದ್ದು, ಆನ್‌ಲೈನ್ ಮೂಲಕ 4,069 ಮತದಾರರು ಅರ್ಜಿ ಸಲ್ಲಿಸಿದ್ದಾರೆ. ಪ್ರಕ್ರಿಯೆಯಲ್ಲಿ 1,52,859 ಶಾಶ್ವತವಾಗಿ ಸ್ಥಳಾಂತರಗೊಂಡವರು, 54,549 ಮೃತಪಟ್ಟವರು ಹಾಗೂ 63,602 ಗೈರುಹಾಜರಾದ ಅಥವಾ ಮಾಹಿತಿ ಸಂಗ್ರಹಿಸಲಾಗದ ಮತದಾರರನ್ನು ಗುರುತಿಸಲಾಗಿದೆ. ಇದೇ ವೇಳೆ 29,623 ಹೊಸ ಮತದಾರರು ನೋಂದಾಯಿಸಿಕೊಂಡಿದ್ದಾರೆ” ಎಂದು ಮಾಹಿತಿ ನೀಡಿದರು.
ಮುದ್ದೇಬಿಹಾಳ, ದೇವರಹಿಪ್ಪರಗಿ, ಬಸವನಬಾಗೇವಾಡಿ, ಬಬಲೇಶ್ವರ, ವಿಜಯಪುರ ನಗರ, ನಾಗಠಾಣ, ಇಂಡಿ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬಿಎಲ್‌ಒಗಳು ಕಾರ್ಯವನ್ನು ಇನ್ನಷ್ಟು ಚುರುಕುಗೊಳಿಸಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಈಗಾಗಲೇ ಗುರುತಿಸಲಾದ ಗೈರುಹಾಜರು, ವಲಸೆ, ಮರಣ ಹಾಗೂ ಡುಪ್ಲಿಕೇಟ್ (ಎಸ್‌ಡಿಡಿಒ) ಮತದಾರರ ಪಟ್ಟಿಯನ್ನು ಒಂಬತ್ತು ಸೆಟ್‌ಗಳಲ್ಲಿ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು, ಮತಗಟ್ಟೆ ಅಧಿಕಾರಿಗಳು, ಗ್ರಾಮ ಪಂಚಾಯತಿಗಳು, ತಹಶೀಲ್ದಾರ್ ಹಾಗೂ ತಾಲ್ಲೂಕು ಕಚೇರಿಗಳ ಪ್ರಕಟಣಾ ಫಲಕಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗುವುದು. ಸಾರ್ವಜನಿಕರು ಮತ್ತು ರಾಜಕೀಯ ಪಕ್ಷಗಳು ಪಟ್ಟಿಯನ್ನು ಪರಿಶೀಲಿಸಿ ಯಾವುದೇ ಆಕ್ಷೇಪಣೆ ಅಥವಾ ಅನುಮಾನಗಳಿದ್ದರೆ ಸಂಬಂಧಪಟ್ಟ ಮತದಾರರ ನೋಂದಣಾಧಿಕಾರಿಗಳಿಗೆ ಮಾಹಿತಿ ನೀಡಬಹುದಾಗಿದೆ. ಬಳಿಕ ಅಧಿಕಾರಿಗಳು ಮರುಪರಿಶೀಲನೆ ನಡೆಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಆಗಸ್ಟ್ 17ರಿಂದ ಸೆಪ್ಟೆಂಬರ್ 16ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಅರ್ಹ ಮತದಾರರು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ನಮೂನೆ-6 ಭರ್ತಿ ಮಾಡಿ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಸಿಕೊಳ್ಳಬಹುದು. ಇದೇ ವೇಳೆ, ಅಕ್ಟೋಬರ್ 1ರಂದು 18 ವರ್ಷ ಪೂರ್ಣಗೊಳ್ಳುವ ಯುವಕರು ಸಹ ನಮೂನೆ-6 ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬಹುದು ಎಂದು ಹೇಳಿದರು.
ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿರುವವರಿಗೆ ನೋಟಿಸ್ ನೀಡಲಾಗುವುದು. ಅಂತಹ ಮತದಾರರು ಗಣತಿ ನಮೂನೆಯ ಹಿಂಭಾಗದಲ್ಲಿ ಸೂಚಿಸಿರುವ ಅಗತ್ಯ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಸಲ್ಲಿಸಿ ತಮ್ಮ ಹೆಸರನ್ನು ಅಂತಿಮ ಮತದಾರರ ಪಟ್ಟಿಯಲ್ಲಿ ಸೇರಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪ ವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ, ಯೋಜನಾ ನಿರ್ದೇಶಕ ಬದ್ರುದ್ದೀನ್ ಸೌದಾಗರ್, ತಹಶೀಲ್ದಾರ್ ಪ್ರಶಾಂತ ಚನಗೊಂಡ, ಚುನಾವಣಾ ತಹಶೀಲ್ದಾರ್ ಪವಾರ, ಸಚ್ಚಿದಾನಂದ ತೇರದಾಳ ಸೇರಿದಂತೆ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.




