ಬಹುನಿರೀಕ್ಷಿತ ವಿಜಯಪುರ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಆರಂಭಕ್ಕೆ ಮುಹೂರ್ತ ಕೂಡಿ ಬಂದಿದ್ದು, 2027ರ ಜನವರಿಯೊಳಗೆ ವಿಮಾನಯಾನ ಸೇವೆ ಆರಂಭಿಸುವ ಪ್ರಯತ್ನ ಕೈಗೂಡಲಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ (ಕೆಎಸ್‌ಐಐಡಿಸಿ) ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ವಿಶ್ವಾಸ ವ್ಯಕ್ತಪಡಿಸಿದರು.
ವಿಜಯಪುರ ನಗರದ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲಿಸಿದ ಬಳಿಕ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಸರ ಇಲಾಖೆಯ ಅನುಮತಿ ಇಲ್ಲದಿರುವುದು ಹಾಗೂ ಸುಪ್ರೀಂ ಕೋರ್ಟ್‌ನ ತಡೆಯಾಜ್ಞೆಯಿಂದ ವಿಮಾನ ನಿಲ್ದಾಣದ ಕಾರ್ಯಾರಂಭ ವಿಳಂಬವಾಗಿತ್ತು. ಇದೀಗ ಸುಮಾರು ಮೂರು ವಾರಗಳ ಹಿಂದೆ ತಡೆಯಾಜ್ಞೆ ತೆರವಾಗಿದ್ದು, ವಿಮಾನಯಾನ ಆರಂಭಕ್ಕೆ ಇದ್ದ ಪ್ರಮುಖ ಅಡೆತಡೆ ನಿವಾರಣೆಯಾಗಿದೆ ಎಂದರು.
ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ಪಡೆಯಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಸಂಸತ್ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ವಿಳಂಬವಾಗುವ ಸಾಧ್ಯತೆಯಿದ್ದರೂ, ಶೀಘ್ರದಲ್ಲೇ ಅನುಮತಿ ದೊರೆಯುವ ವಿಶ್ವಾಸವಿದೆ ಎಂದು ಹೇಳಿದರು.
ತಾಂತ್ರಿಕ ವಿಭಾಗ ಹಾಗೂ ರಾಷ್ಟ್ರೀಯ ವಿಮಾನಯಾನ ಇಲಾಖೆಯಿಂದ ಅಂತಿಮ ಅನುಮೋದನೆ ದೊರೆತ ಬಳಿಕ ವಿಮಾನ ಹಾರಾಟ ಆರಂಭವಾಗಲಿದೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರ ಸಹಕಾರದಿಂದ ಹೊಸ ವರ್ಷದ ಆರಂಭದಲ್ಲೇ ವಿಜಯಪುರದಿಂದ ವಿಮಾನಯಾನ ಸೇವೆ ಆರಂಭಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಏರ್‌ಬಸ್-320 ಮಾದರಿಯ ವಿಮಾನಗಳ ಹಾರಾಟಕ್ಕೆ ಅನುಕೂಲವಾಗುವಂತೆ ವಿಜಯಪುರ ವಿಮಾನ ನಿಲ್ದಾಣವನ್ನು ₹618.75 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ರಾಜ್ಯ ಸರ್ಕಾರದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಿಂದ ಕಾಮಗಾರಿಗೆ ಅನುದಾನ ಒದಗಿಸಲಾಗುತ್ತಿದ್ದು, ಕೆಎಸ್‌ಐಐಡಿಸಿಯನ್ನು ನೋಡಲ್ ಏಜೆನ್ಸಿಯಾಗಿ ನೇಮಕ ಮಾಡಲಾಗಿದೆ.
ಲೋಕೋಪಯೋಗಿ ಇಲಾಖೆಯ ಮೂಲಕ ಕಾಮಗಾರಿ ಅನುಷ್ಠಾನಗೊಳ್ಳುತ್ತಿದ್ದು, ಬೆಂಗಳೂರಿನ ಐಡೆಕ್ ಸಂಸ್ಥೆಯನ್ನು ಯೋಜನಾ ನಿರ್ವಹಣೆ ಮತ್ತು ಸಲಹೆಗಾರ ಸಂಸ್ಥೆಯಾಗಿ (ಪಿಎಂಸಿ) ನೇಮಿಸಲಾಗಿದೆ. ವಿಮಾನ ನಿಲ್ದಾಣದ ಕಾರ್ಯಾಚರಣೆಗೆ ಅಗತ್ಯವಿರುವ ಎರಡು ಅಗ್ನಿಶಾಮಕ ವಾಹನಗಳು, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ (ಬಿಡಿಡಿಎಸ್) ಉಪಕರಣಗಳು ಹಾಗೂ ಡಿವಿಓಆರ್ ಉಪಕರಣಗಳನ್ನು ಈಗಾಗಲೇ ಖರೀದಿಸಲಾಗಿದೆ ಎಂದರು.
ವಿಮಾನ ನಿಲ್ದಾಣದಲ್ಲಿ ರಾತ್ರಿ ವಿಮಾನ ಕಾರ್ಯಾಚರಣೆಗೆ ಅಗತ್ಯವಿರುವ ಕಾಮಗಾರಿಗಳಿಗೆ, ಭೂಸ್ವಾಧೀನ ಸೇರಿದಂತೆ ₹65 ಕೋಟಿ ಹಾಗೂ ರಾಷ್ಟ್ರೀಯ ಹೆದ್ದಾರಿ-50ರ ವಿಜಯಪುರ–ಕಲಬುರಗಿ ರಸ್ತೆಯಿಂದ ವಿಮಾನ ನಿಲ್ದಾಣಕ್ಕೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಸ್ವಾಧೀನ ಸೇರಿದಂತೆ ₹52 ಕೋಟಿ ಅನುದಾನಕ್ಕೆ ರಾಜ್ಯ ಸರ್ಕಾರ 2025ರ ಅಕ್ಟೋಬರ್ 3ರಂದು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ವಿವರಿಸಿದರು.
ಈ ಎರಡೂ ಕಾಮಗಾರಿಗಳಿಗೆ ಅಗತ್ಯವಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಕೆಐಎಡಿಬಿ ಮೂಲಕ ಪ್ರಕ್ರಿಯೆ ನಡೆಯುತ್ತಿದೆ. ಪ್ರಾಥಮಿಕ ಅಧಿಸೂಚನೆಗೆ ಈಗಾಗಲೇ ಅನುಮೋದನೆ ದೊರೆತಿದ್ದು, ಭೂಮಾಲೀಕರೊಂದಿಗೆ ಆಕ್ಷೇಪಣೆ ಸಭೆಯನ್ನೂ ನಡೆಸಲಾಗಿದೆ. ಸದ್ಯ ಜಂಟಿ ಮಾಪನ ಕಾರ್ಯ (ಜೆಎಂಸಿ) ಪ್ರಗತಿಯಲ್ಲಿದ್ದು, ಅದು ಪೂರ್ಣಗೊಂಡ ಬಳಿಕ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ನಂತರ ಟೆಂಡರ್ ಆಹ್ವಾನಿಸಲಾಗುವುದು ಎಂದು ನಂಜಯ್ಯನಮಠ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಸಿ.ಎಸ್. ಪೊಲೀಸ್ ಪಾಟೀಲ, ಸಹಾಯಕ ಎಂಜಿನಿಯರ್ ಆರ್.ಎನ್. ಮಸಳಿ, ವಿಮಾನ ನಿಲ್ದಾಣದ ನಿರ್ದೇಶಕ ಪಿ.ಸಿ. ಪೊನ್ನಪ್ಪ, ಚಂದ್ರಶೇಖರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




