ಆಲಮಟ್ಟಿ ಲಾಲಬಹದ್ದೂರ ಶಾಸ್ತ್ರಿ ಜಲಾಶಯದಿಂದ ಕೆಪಿಸಿಎಲ್ ಮೂಲಕ ನಾರಾಯಣಪುರ ಜಲಾಶಯಕ್ಕೆ ಪ್ರತಿದಿನ ಸಾವಿರಾರು ಕ್ಯೂಸೆಕ್ ನೀರು ಹರಿಸುತ್ತಿರುವುದನ್ನು ತಕ್ಷಣ ನಿಲ್ಲಿಸಬೇಕು. ಇಲ್ಲದಿದ್ದರೆ ಜಲಾಶಯಕ್ಕೆ ಇಳಿದು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಎಚ್ಚರಿಕೆ ನೀಡಿದರು.
ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ವಿಜಯಪುರದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಆನಂದ ಕೆ. ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಕಳೆದ 19ರಿಂದ ನಾರಾಯಣಪುರ ಜಲಾಶಯಕ್ಕೆ ನಿರಂತರವಾಗಿ ನೀರು ಹರಿಸಲಾಗುತ್ತಿದ್ದು, ಈಗಾಗಲೇ ಸುಮಾರು 7 ಟಿಎಂಸಿ ನೀರು ಹರಿಸಲಾಗಿದೆ ಎಂದು ಆರೋಪಿಸಿದರು.
ಅಲ್ಲಿಂದ ತೆಲಂಗಾಣಕ್ಕೆ ನೀರು ಹರಿಸುವ ಉದ್ದೇಶವಿದೆ ಎಂಬ ಅನುಮಾನ ವ್ಯಕ್ತಪಡಿಸಿದ ಅವರು, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ರೈತರಿಗೆ ಹಿಂಗಾರು ಬೆಳೆಗೆ ನೀರು ನಿರಾಕರಿಸಿ, ಬೇರೆ ಭಾಗಕ್ಕೆ ನೀರು ಹರಿಸುವುದು ಅನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು.ಮುಂಗಾರು ಬೆಳೆ ನಷ್ಟದಿಂದ ಕಂಗಾಲಾಗಿರುವ ರೈತರು ಜೋಳ, ಗೋಧಿ, ಕಡಲೆ ಸೇರಿದಂತೆ ಹಿಂಗಾರು ಬೆಳೆಗಳ ನಿರೀಕ್ಷೆಯಲ್ಲಿದ್ದಾರೆ.
ಇಂತಹ ಸಂದರ್ಭದಲ್ಲಿ ನೀರನ್ನು ಬೇರೆಡೆಗೆ ಹರಿಸಿದರೆ ಕುಡಿಯುವ ನೀರಿಗೂ ತೀವ್ರ ಅಭಾವ ಉಂಟಾಗುವ ಸಾಧ್ಯತೆಯಿದೆ. ಸರ್ಕಾರ ಕೂಡಲೇ ನೀರು ಹರಿಸುವುದನ್ನು ಸ್ಥಗಿತಗೊಳಿಸಿ, ಅವಳಿ ಜಿಲ್ಲೆಯ ರೈತರ ಹಿತ ಕಾಪಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಹಣಮಂತ್ರಾಯ ಹಂದ್ರಾಳ, ಚಂದ್ರಾಮ ತೆಗ್ಗಿ, ಗೌಡಪ್ಪ ಬಿರಾದಾರ, ರಾಯಪ್ಪಗೌಡ ಪುಲೇಶಿ, ನಾಗರಾಜ ವಂದಾಲ, ರಾಯಪ ಸಂಕನಾಳ, ಬಸವರಾಜ ಬಿರಾದಾರ, ಮಲ್ಲಿಕಾರ್ಜುನ ಬಟಗಿ, ರಾಜು ವಂದಾಲ, ಸಂತೋಷ ಬಿರಾದಾರ, ಶ್ರೀಶೈಲ ಸಾಸನೂರ, ಮುತ್ತಣ್ಣ ಇಟಗಿ, ಶಿವಾನಂದ ಬಿರಾದಾರ, ಬನ್ನೆಪ್ಪ ಜೋಗಿ, ನಿಂಗಪ್ಪ ಕೋರವಾರ, ಮಲ್ಲನಗೌಡ ಪಾಟೀಲ ಡೋಮನಾಳ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.





