ಏ.22 ರಿಂದ 24ರವರೆಗೆ ನಡೆಯಲಿರುವ 2026ನೇ ಸಾಲಿನ CET ಪ್ರವೇಶ ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಸುಸೂತ್ರವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪರೀಕ್ಷೆಗೆ ಸಂಬಂಧಿಸಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಒಟ್ಟು 30 ಪರೀಕ್ಷಾ ಕೇಂದ್ರಗಳಲ್ಲಿ ಎರಡು ಅವಧಿಯಲ್ಲಿ ಪರೀಕ್ಷೆ ನಡೆಯಲಿದ್ದು, 13,359 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಯಾವುದೇ ಸಮಸ್ಯೆ ಬಾರದ ರೀತಿಯಲ್ಲಿ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಮುಂಜಾಗ್ರತೆಯಿಂದ ಪರೀಕ್ಷಾ ನಿಯಮಗಳನ್ವಯ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.
ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ವೀಕ್ಷಕರಂತೆ ಒಟ್ಟು 30 ವೀಕ್ಷಕರನ್ನು ನೇಮಿಸಿದೆ. ಪರೀಕ್ಷಾ ಕೇಂದ್ರಕ್ಕೆ ನಿಯೋಜಿಸಲಾದ ವೀಕ್ಷಕರು ಪರೀಕ್ಷೆ ಪ್ರಾರಂಭವಾಗುವ ಸಮಯಕ್ಕಿಂತ ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ಉಪ ಮುಖ್ಯ ಅಧಿಕ್ಷಕರು, ಓರ್ವ ಪ್ರಶ್ನೆಪತ್ರಿಕೆ ಪಾಲಕರು ಹಾಗೂ ಓರ್ವ ವಿಶೇಷ ಸ್ಥಾನಿಕ ಜಾಗೃತದಳ ಸದಸ್ಯರನ್ನು ನೇಮಿಸಿದೆ. ಪರೀಕ್ಷಾ ನಡೆಯುವ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಆದೇಶಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮುಂಜಾಗ್ರತಾ ಕ್ರಮವಾಗಿ ಸೂಕ್ತ ಬಂದೋಬಸ್ತ್ ಕೈಗೊಳ್ಳಲು ಸೂಚಿಸಲಾಯಿತು.
ಇದನ್ನೂ ಓದಿ: ವಿಜಯಪುರ | ಕಾರ್ಮಿಕ ಹೋರಾಟಗಳ ಹತ್ತಿಕ್ಕುವ ಪ್ರಯತ್ನ; ಬಿಜೆಪಿ ಸರ್ಕಾರಗಳ ವಿರುದ್ಧ CITU ಆಕ್ರೋಶ
ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ಹೊಸಮನಿ, ಉಪಾಧೀಕ್ಷಕರು, ಮಾರ್ಗಾಧಿಕಾರಿಗಳು,ವೀಕ್ಷಕರು ಸೇರಿದಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.





