ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ನ.23ರಂದು ಪಟ್ಟಣಕ್ಕೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ. ಎಸ್. ನಾಡಗೌಡ ತಿಳಿಸಿದ್ದಾರೆ.
ಅಂದು ಪಟ್ಟಣದಲ್ಲಿ ಮೌಲಾನಾ ಅಬುಲ್ ಕಲಾಂ ಆಜಾದ್ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ. ಬಳಿಕ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ವ್ಯವಸ್ಥೆ ಹಾಗೂ ಆರೋಗ್ಯ ಸೇವೆಗಳ ಕುರಿತು ಪರಿಶೀಲನೆ ನಡೆಸಲಿದ್ದಾರೆ. ನಂತರ ತಾಳಿಕೋಟೆಗೆ ತೆರಳಲಿರುವ ಸಚಿವರು, ಅಲ್ಲಿ ಮುಸ್ಲಿಂ ಸಮುದಾಯದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ತಾಳಿಕೋಟೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯ ಕುಂದುಕೊರತೆಗಳನ್ನು ಆಲಿಸಲಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



