ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಜನವರಿ 1, 2027ನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ ವಿಜಯಪುರ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (SSR-2027) ಕೈಗೊಳ್ಳಲಾಗುತ್ತಿದ್ದು, ಈ ಪ್ರಕ್ರಿಯೆಗೆ ವೇಳಾಪಟ್ಟಿ ನಿಗದಿಪಡಿಸಲಾಗಿದೆ.
ಮತದಾರರ ಪಟ್ಟಿಯಿಂದ ಹೊರಗುಳಿದಿರುವ ಯುವ ಮತದಾರರು ಹಾಗೂ ಮೊದಲ ಬಾರಿಗೆ ಮತದಾನ ಮಾಡಲು ಅರ್ಹತೆ ಹೊಂದಿರುವ ನಾಗರಿಕರನ್ನು ಪಟ್ಟಿಗೆ ಸೇರ್ಪಡೆಗೊಳಿಸುವುದು ಈ ವಿಶೇಷ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಜನವರಿ 1ರ ಅರ್ಹತಾ ದಿನಾಂಕದೊಂದಿಗೆ, 2027ರ ಏಪ್ರಿಲ್ 1, ಜುಲೈ 1 ಮತ್ತು ಅಕ್ಟೋಬರ್ 1ರ ಅರ್ಹತಾ ದಿನಾಂಕಗಳಿಗೂ ಮುಂಗಡವಾಗಿ ಮತದಾರರ ನೋಂದಣಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಪರಿಷ್ಕರಣೆಯ ವೇಳಾಪಟ್ಟಿ ಹೀಗಿದೆ
ನವೆಂಬರ್ 23ರಂದು ಮತಗಟ್ಟೆಗಳ ತರ್ಕಬದ್ಧಗೊಳಿಸುವಿಕೆ ಕಾರ್ಯ ನಡೆಯಲಿದೆ. ಡಿಸೆಂಬರ್ 1ರಂದು ಸಮಗ್ರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಡಿಸೆಂಬರ್ 1ರಿಂದ 31ರವರೆಗೆ ಕರಡು ಪಟ್ಟಿಗೆ ಸಂಬಂಧಿಸಿದಂತೆ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿರುತ್ತದೆ. ಸಲ್ಲಿಕೆಯಾದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಜನವರಿ 14ರಂದು ವಿಲೇವಾರಿ ಮಾಡಲಾಗುತ್ತದೆ. ಅಂತಿಮವಾಗಿ ಜನವರಿ 20ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು.ಆನ್‌ಲೈನ್, ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಲು ಅರ್ಹ ನಾಗರಿಕರು ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಆನ್‌ಲೈನ್ ಅರ್ಜಿಗಾಗಿ ಚುನಾವಣಾ ಆಯೋಗದ ಅಧಿಕೃತ ಮತದಾರರ ಸೇವಾ ಪೋರ್ಟಲ್ https://voters.eci.gov.in ಅಥವಾ ಚುನಾವಣಾ ಆಯೋಗದ ECINET ಮೊಬೈಲ್ ಅಪ್ಲಿಕೇಶನ್ ಬಳಸಬಹುದು.ಇದರ ಜೊತೆಗೆ ತಮ್ಮ ವ್ಯಾಪ್ತಿಯ ಬೂತ್ ಮಟ್ಟದ ಅಧಿಕಾರಿ (BLO), ಸಹಾಯಕ ಮತದಾರರ ನೋಂದಣಾಧಿಕಾರಿ ಅಥವಾ ಮತದಾರರ ನೋಂದಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಲು ಅವಕಾಶವಿದೆ.
ಜಿಲ್ಲೆಯ ಎಲ್ಲ ಅರ್ಹ ನಾಗರಿಕರು ಈ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅಭಿಯಾನದ ಸದುಪಯೋಗ ಪಡೆದುಕೊಂಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




