ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಮುಂದುವರಿಕೆಗೆ ವಿರೋಧ ವ್ಯಕ್ತಪಡಿಸಿ ಜಮೀರ್ ಅಹ್ಮದ್ ಖಾನ್, ಸತೀಶ್ ಜಾರಕಿಹೊಳಿ ಸೇರಿದಂತೆ ಒಟ್ಟು 36 ಶಾಸಕರು ಸಹಿ ಸಂಗ್ರಹಿಸಿದ್ದರು ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ಸಂಪೂರ್ಣ ಸುಳ್ಳು, ಕಾಂಗ್ರೆಸ್ ಪಕ್ಷದೊಳಗೆ ಅನಗತ್ಯ ಗೊಂದಲ ಸೃಷ್ಟಿಸಲು ಯತ್ನಾಳ್ ಯತ್ನಿಸುತ್ತಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
“ಯತ್ನಾಳ್‌ಗೆ ಬಾಯಿಗೆ ಬಂದಂತೆ ಮಾತನಾಡುವುದು ಚಾಳಿಯಾಗಿದೆ. ಯಾವುದೇ ಆಧಾರವಿಲ್ಲದೆ ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಪಕ್ಷದಲ್ಲಿ ಗೊಂದಲ ಮೂಡಿಸುವ ಪ್ರಯತ್ನ ಮಾಡಬಾರದು. ಸುಳ್ಳು ಮತ್ತು ಅಪಪ್ರಚಾರ ಮುಂದುವರಿಸಿದರೆ ಅದಕ್ಕೆ ತಕ್ಕ ಉತ್ತರ ನೀಡಲು ಪರ್ಯಾಯ ದಾರಿ ಹಿಡಿಯಬೇಕಾಗುತ್ತದೆ” ಎಂದು ಪ್ರತಿಕ್ರಿಸಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿರಲಿ ಅಥವಾ ಇರದಿರಲಿ, ಅವರೇ ನಮ್ಮ ನಾಯಕರು. ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಸ್ವತಃ ರಾಹುಲ್ ಗಾಂಧಿಯವರೇ ಸಿದ್ದರಾಮಯ್ಯ ಅವರನ್ನು ಕರೆಸಿಕೊಂಡು ಮಾತನಾಡಿದ್ದಾರೆ. ಚುನಾವಣಾ ರಾಜಕೀಯದಿಂದ ಸಿದ್ದರಾಮಯ್ಯ ಅವರು ಹಿಂದೆ ಸರಿಯಬಾರದು ಎಂಬ ಅಭಿಪ್ರಾಯವನ್ನೂ ರಾಹುಲ್ ಗಾಂಧಿ ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದ್ದಾರೆ.
ಇಂತಹ ಸಂದರ್ಭದಲ್ಲಿ ಯತ್ನಾಳ ಅವರು ಆಧಾರರಹಿತ ಹೇಳಿಕೆಗಳನ್ನು ನೀಡುವ ಮೂಲಕ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಸರಿಯಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಮಾತನಾಡುವಾಗ ವಾಸ್ತವಾಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಎಂ.ಬಿ.ಪಾಟೀಲ್ ತಮ್ಮ ಫೇಸ್‌ಬುಕ್ ಪೋಸ್ಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.




