ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಣದ ಜೊತೆಗೆ ವಿವಿಧ ಕೌಶಲ್ಯಗಳನ್ನು ಕರಗತ ಮಾಡಿಕೊಂಡು ಆತ್ಮವಿಶ್ವಾಸದಿಂದ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಎಸ್. ಹೊರಟ್ಟಿ ಹೇಳಿದರು.
ವಿಜಯಪುರ ನಗರದ ಹೊರವಲಯದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ನೂತನವಾಗಿ ನಿರ್ಮಿಸಲಾದ ದಶಮಾನೋತ್ಸವ ಕಟ್ಟಡದ ಉದ್ಘಾಟನೆ ಹಾಗೂ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಮನಸ್ಸು ಮಾಡಿದರೆ ಯಾವುದೇ ಕ್ಷೇತ್ರದಲ್ಲೂ ಸಾಧನೆ ಸಾಧ್ಯ. ವಿದ್ಯಾರ್ಥಿನಿಯರು ಕಲಿಕೆಯೊಂದಿಗೆ ಹೊಸ ಆವಿಷ್ಕಾರಗಳತ್ತ ಗಮನ ಹರಿಸಬೇಕು. ಬಸವಣ್ಣ ಹಾಗೂ ಅಕ್ಕಮಹಾದೇವಿಯವರ ವಚನಗಳಲ್ಲಿರುವ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಉತ್ತಮ ಜ್ಞಾನ, ಶಿಕ್ಷಣ ಮತ್ತು ಆತ್ಮವಿಶ್ವಾಸದ ಮೂಲಕ ಉನ್ನತ ಸ್ಥಾನವನ್ನು ತಲುಪಬೇಕು ಎಂದು ಸಲಹೆ ನೀಡಿದರು.
ಕರ್ನಾಟಕದಲ್ಲಿ ದೇಶದ ಮೊದಲ ವಿಜ್ಞಾನ ಅಕಾಡೆಮಿಯನ್ನು ಆರಂಭಿಸಲಾಗಿದ್ದು, ಅದರ ಉದ್ಘಾಟನೆಯನ್ನು ಅಂದಿನ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ನೆರವೇರಿಸಿದ್ದನ್ನು ಸ್ಮರಿಸಿದ ಅವರು, ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ರಾಜ್ಯದ ಕೊಡುಗೆ ಗಮನಾರ್ಹವಾಗಿದೆ ಎಂದರು.
ಮಹಿಳೆಯರು ಸಣ್ಣ ಉದ್ಯಮಗಳಿಂದಲೂ ದೊಡ್ಡ ಮಟ್ಟದ ಯಶಸ್ಸು ಸಾಧಿಸಬಹುದಾಗಿದೆ. “ನಮ್ಮಿಂದ ಏನೂ ಸಾಧ್ಯವಿಲ್ಲ” ಎಂಬ ಮನೋಭಾವವನ್ನು ತೊರೆದು ದೊರೆಯುವ ಅವಕಾಶಗಳನ್ನು ಬಳಸಿಕೊಂಡು ಸ್ವಾವಲಂಬಿಗಳಾಗಬೇಕು ಎಂದು ಕರೆ ನೀಡಿದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, “ಮಹಿಳೆಯರಿಗೆ ದೇಶದಲ್ಲಿ ಸಮಾನ ಅವಕಾಶಗಳು ಲಭ್ಯವಿದ್ದು, ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು” ಎಂದರು.
ತಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಶೇ. 100ರಷ್ಟು ಮಹಿಳಾ ಪ್ರಾಧ್ಯಾಪಕರು ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದ ಅವರು, ಅನುದಾನರಹಿತ ಶಾಲೆಗಳಿಗೆ ಅನುದಾನ ದೊರಕಿಸುವಲ್ಲಿ ಬಸವರಾಜ ಎಸ್. ಹೊರಟ್ಟಿ ಅವರ ಕೊಡುಗೆಯನ್ನು ಶ್ಲಾಘಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಎಸ್.ವಿ. ಹಲಸೆ ಮಾತನಾಡಿ, “ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ಉತ್ತರ ಕರ್ನಾಟಕದ ಮಹಿಳಾ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣದ ಪ್ರಮುಖ ಕೇಂದ್ರವಾಗಿ ರೂಪುಗೊಂಡಿದೆ” ಎಂದು ಹೇಳಿದರು.
ಕೌಶಲ್ಯಾಧಾರಿತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಸಾಧಿಸಲು ವಿದ್ಯಾರ್ಥಿನಿಯರು ಸಜ್ಜಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು.
ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಮಾತನಾಡಿ, ವಿಶ್ವವಿದ್ಯಾಲಯದ ಶೈಕ್ಷಣಿಕ ಸಾಧನೆ, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ವಿದ್ಯಾರ್ಥಿನಿಯರ ಸಬಲೀಕರಣಕ್ಕಾಗಿ ಕೈಗೊಂಡಿರುವ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಹನುಮಂತ ನಿರಾಣಿ, ಮೌಲ್ಯಮಾಪನ ಕುಲಸಚಿವ ಪ್ರೊ. ಬಿ.ಎಲ್. ಲಕ್ಕಣ್ಣವರ, ಕುಲಸಚಿವ ಶಂಕರಗೌಡ ಡಿ. ಸೋಮನಾಳ, ಆರ್ಥಿಕ ಅಧಿಕಾರಿ ರಾಮಣ್ಣಗೌಡ ಆಥಣಿ, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.





