ಅತಿದೊಡ್ಡ ಜನಸಂಖ್ಯೆ ಹೊಂದಿರುವ ಭಾರತದ ಸದೃಢ ಅಭಿವೃದ್ಧಿ ಹಾಗೂ ಸುಸ್ಥಿರ ಸರ್ಕಾರದ ನಿರ್ಮಾಣಕ್ಕಾಗಿ ಎಲ್ಲರೂ ಮತದಾನ ಜಾಗೃತಿ ಮೂಡಿಸಿ ಮತದಾನದಲ್ಲಿ ಪಾಲ್ಗೊಂಡಾಗ ಮಾತ್ರ ಪ್ರಜಾಪ್ರಭುತ್ವಕ್ಕೆ ಬೆಲೆ ಬರುತ್ತದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ್ ಹೇಳಿದರು.
ಬೀದರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಮತದಾರರ ಪ್ರತಿಜ್ಞಾ ವಿಧಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ʼಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಮತದಾನವು ಮಹತ್ವದ ಪಾತ್ರ ವಹಿಸುತ್ತದೆ. ಹೆಚ್ಚಿನ ಯುವ ಜನಾಂಗವನ್ನು ಹೊಂದಿರುವ ಭಾರತದಂತಹ ದೇಶದಲ್ಲಿ ಮತದಾನದ ಅವಶ್ಯಕತೆಯಿದೆ. ಎಲ್ಲರೂ ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕುʼ ಎಂದರು.
ಬೀದರ ವಿಶ್ವವಿದ್ಯಾಲಯದ ಕುಲಸಚಿವರಾದ (ಆಡಳಿತ) ಸುರೇಖಾ ಕೆ.ಎ.ಎಸ್. ಅವರು ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ, ʼಪ್ರಸ್ತುತ ದಿನಗಳಲ್ಲಿ ಮತದಾನದ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಎಷ್ಟೋ ಜನ ಯುವಕರು ಜಾಗೃತೆಯ ಕೊರತೆಯಿಂದ ಮತದಾನದ ಹಕ್ಕಿನಿಂದ ವಂಚಿತರಾಗುತ್ತಿದ್ದಾರೆ. ಯುವಕರು ಗೂಗಲ್ ಪ್ಲೇ ಸ್ಟೋರ್‌ನ ವೋಟರ್ ಹೆಲ್ಪ್‌ಲೈನ್ ಆಪ್‌ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. ವಿದ್ಯಾವಂತರು, ಯುವ ಸಮೂಹ ಮತದಾನ ಕುರಿತು ಹೆಚ್ಚಿನ ಜಾಗೃತಿ ಮಾಡಬೇಕುʼ ಎಂದರು.
ಈ ಸುದ್ದಿ ಓದಿದ್ದೀರಾ? ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ: ಸಿಎಂ ಘೋಷಣೆ
ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ.ಪರಮೇಶ್ವರ ನಾಯಕ, ವಿಶೇಷಾಧಿಕಾರಿಗಳಾದ ಡಾ.ರವೀಂದ್ರನಾಥ ಗಬಾಡಿ ಸೇರಿದಂತೆ ವಿಶ್ವವಿದ್ಯಾಲಯದ ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.