- ಜಿಲ್ಲಾ ಟಾಸ್ಕ್‌ಪೋರ್ಸ್ ಸಭೆ ನಡೆಸಿದ ಜಿಲ್ಲಾಧಿಕಾರಿ
- ಜಾನುವಾರು ಮೇವು ಕೊರತೆಯಾಗದಂತೆ ಕ್ರಮ
ಜೂನ್ ಅಂತ್ಯದವರೆಗೆ ಕೊಪ್ಪಳ ಜಿಲ್ಲೆಯ ಯಾವುದೇ ಕಡೆಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಅಗತ್ಯ ಮುಂಜಾಗ್ರತೆ ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ ಸುಂದರೇಶ ಬಾಬು ಸೂಚನೆ ನೀಡಿದರು.
ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ಟಾಸ್ಕ್‌ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
“ನೀರಿನ ತೊಂದರೆ ಎದುರಿಸುತ್ತಿರುವ ಗ್ರಾಮಗಳಲ್ಲಿ ನೀರಿನ ಮೂಲಗಳಿದ್ದಲ್ಲಿ ಮಾತ್ರ ಬೋರವೆಲ್ ಕೊರೆಯಿಸಲು ಕ್ರಮ ವಹಿಸಬೇಕು. ಗ್ರಾಮದಲ್ಲಿ ನೀರಿನ ಮೂಲಗಳ ಬಗ್ಗೆ ತಜ್ಞರೊಂದಿಗೆ ಪರೀಕ್ಷೆಗೆ ಕ್ರಮ ವಹಿಸುವುದರ ಜೊತೆಗೆ ಆಯಾ ಗ್ರಾಮಸ್ಥರ ಸಲಹೆ ಪಡೆದುಕೊಳ್ಳಬೇಕು. ಡಿಬಿಓಟಿ ಮೂಲಕ ನೀರು ಪೂರೈಕೆ ಸಾಧ್ಯವಾಗದೇ ಇದ್ದಾಗ ಮತ್ತು ಖಾಸಗಿ ಬೋರವೆಲ್‌ಗಳು ಸಿಗದೇ ಇದ್ದಲ್ಲಿ ಅವಶ್ಯವಿರುವ ಕಡೆ ಬೋರವೆಲ್ ಕೊರೆಯಿಸಲು ಕ್ರಮ ವಹಿಸಬೇಕು” ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಪಟ್ಟಣ ಪ್ರದೇಶಗಳಲ್ಲಿ ಬೋರವೆಲ್ ದುರಸ್ತಿ, ಮೋಟರ್ ಬದಲಾವಣೆಯಂತಹ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ನಿಟ್ಟಿನಲ್ಲಿ ಬೇಕಾಗುವ ಉಪಕರಣಗಳ ಸಿದ್ಧತೆ ಮತ್ತು ಕಾರ್ಮಿಕರು ಲಭ್ಯವಾಗುವ ವ್ಯವಸ್ಥೆ ಮಾಡಿಟ್ಟುಕೊಂಡಿರಬೇಕು. ಗ್ರಾಮೀಣ ಪ್ರದೇಶದಲ್ಲಿ ಪೈಪಲೈನ್ ದುರಸ್ತಿ ಮತ್ತು ಇನ್ನೀತರ ಕಾರ್ಯಗಳಿಗೆ ಗ್ರಾಮ ಪಂಚಾಯಿತಿಯಲ್ಲಿ ಎಲ್ಲ ರೀತಿಯ ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು ಎಂದು ಸಲಹೆ ನಿರ್ದೇಶನ ನೀಡಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ಹಂತದಲ್ಲಿ ನಿರಂತರ ಸಭೆ ನಡೆಸಿ ಗ್ರಾಮವಾರು ಪರಿಶೀಲನೆ ನಡೆಸಿ, ಸಮಸ್ಯೆಗಳಿರುವುದು ಗೊತ್ತಾದಲ್ಲಿ ಸಮರ್ಪಕ ಕುಡಿಯುವ ನೀರಿನ ಪೂರೈಕೆಗೆ ಸಂಬಂಧಿಸಿದಂತೆ ಪರಿಹಾರೋಪಾಯಗಳ ಬಗ್ಗೆ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ಅನುದಾನ ಹೊಂದಾಣಿಕೆ ಮಾಡಿಕೊಂಡು, ದುರಸ್ತಿ ಕಾರ್ಯಕ್ಕೆ ಬಾಕಿ ಇರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸರಿಪಡಿಸುವ ಬಗ್ಗೆ ಕಾರ್ಯಯೋಜನೆ ರೂಪಿಸಿ ವಾರದೊಳಗೆ ವರದಿ ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ ಮಾತನಾಡಿ, ಅಧಿಕಾರಿಗಳು ಆಯಾ ಗ್ರಾಮಗಳಲ್ಲಿನ ಕುಡಿಯುವ ನೀರಿನ ವಾಸ್ತವ ಸ್ಥಿತಿ ಅರಿತು ಜನತೆಗೆ ಸ್ಪಂದನೆ ನೀಡಲು ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮೂಲಕ ಕ್ರಮ ವಹಿಸಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ನಿರ್ದೇಶಿಸಿದರು.
ಈ ಸುದ್ದಿ ಓದಿದ್ದೀರಾ? ಬಿಜೆಪಿ ನಾಮಪತ್ರಗಳ ತಿರಸ್ಕರಿಸದಂತೆ ಸಿಎಂ ಕಚೇರಿಯಿಂದ ಒತ್ತಡ; ಡಿಕೆಶಿ ಆರೋಪ
ಸ್ಥಳೀಯ ಸಂಸ್ಥೆಗಳ ಅಧಿಕಾರಿಗೆ ಸೂಚನೆ:
ಕೊಪ್ಪಳ ಮತ್ತು ಗಂಗಾವತಿ ನಗರ ಪ್ರದೇಶಗಳಲ್ಲಿ ಹಾಗೂ ಕುಷ್ಟಗಿ, ಕಾರಟಗಿ, ಕನಕಗಿರಿ, ಕುಕನೂರ ಮತ್ತು ಯಲಬುರ್ಗಾ ಪಟ್ಟಣ ಪ್ರದೇಶಗಳಲ್ಲಿ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಕುರಿಯುವ ನೀರಿನ ಲಭ್ಯತೆ, ಪೂರೈಕೆಯ ಬಗ್ಗೆ ಜಿಲ್ಲಾಧಿಕಾರಿಗಳು ಇದೆ ವೇಳೆ ಆಯಾ ತಾಲೂಕಿನ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ನಗರ ಮತ್ತು ಪಟ್ಟಣ ಪ್ರದೇಶಗಳ ಮುಖ್ಯಾಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದರು.
ಪಟ್ಟಣ ಮತ್ತು ನಗರ ಪ್ರದೇಶಗಳಲ್ಲಿ ಹಾಗೂ ಆಯಾ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಜೂನ್ ಅಂತ್ಯದವರೆಗೆ ಕುಡಿಯುವ ನೀರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದ ಹಾಗೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಾನುವಾರುಗಳಿಗೆ ತೊಂದರೆಯಾಗದಿರಲಿ:
ಜನರಿಗಷ್ಟೇ ಅಲ್ಲ, ಜಾನುವಾರುಗಳಿಗೂ ನೀರು ಸಿಗುವಂತೆ ವ್ಯವಸ್ಥೆ ಮಾಡಬೇಕು. ಬೇಸಿಗೆ ಅಂತ್ಯದವರೆಗೆ ಕೊರತೆಯಾಗದಂತೆ ಮೇವಿನ ಲಭ್ಯತೆಗೆ ಒತ್ತು ಕೊಡಬೇಕು ಎಂದು ಜಿಲ್ಲಾಧಿಕಾರಿ, ಪಶುಪಾಲನಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಕೊಪ್ಪಳ ನಗರಸಭೆ ಪೌರಾಯುಕ್ತರು, ಆಯಾ ತಾಲೂಕುಗಳ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಹಾಗೂ ಇನ್ನೀತರ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.