ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಭೋಸರಾಜು ಮಾನವ – ವನ್ಯಜೀವಿ ಸಂಘರ್ಷ ತಡೆಗೆ ಶ್ರಮಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾಡು ಪ್ರಾಣಿಗಳ ಹಾವಳಿ ನಿರಂತರವಾಗಿದ್ದು, ತಡೆಯಲು ಅರಣ್ಯ ಇಲಾಖೆ ಅಧಿಕಾರಿಗಳು ಇನ್ನಷ್ಟು ಪರಿಣಾಮಕಾರಿ ಕಾರ್ಯಕ್ರಮ ರೂಪಿಸಬೇಕು. ಕೊಡಗು ಜಿಲ್ಲೆಯಲ್ಲಿ ಅರಣ್ಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸಮಸ್ಯೆಗಳಿದ್ದು, ಬೆಂಗಳೂರಿನಲ್ಲಿ ಅರಣ್ಯ ಸಚಿವರು, ಕೊಡಗು ಜಿಲ್ಲೆಯ ಶಾಸಕರು, ಅರಣ್ಯ ಇಲಾಖೆ ಉನ್ನತ ಮಟ್ಟದ ಅಧಿಕಾರಿಗಳು ಸೇರಿದಂತೆ ಸಭೆ ನಡೆಸುವ ಬಗ್ಗೆ ಚರ್ಚಿಸಿದರು. ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆಡಿಪಿ ಸಭೆಗೆ ಆಗಮಿಸುತ್ತಿಲ್ಲ. ಆದ್ದರಿಂದ, ಸರ್ಕಾರದ ಕಾರ್ಯದರ್ಶಿ ಅವರಿಗೆ ಪತ್ರ ಬರೆಯುವಂತೆ ಜಿಲ್ಲಾಧಿಕಾರಿಯವರಿಗೆ ನಿರ್ದೇಶನ ನೀಡಿದರು.
ಶಾಸಕ ಎ. ಎಸ್. ಪೊನ್ನಣ್ಣ ಮಾತನಾಡಿ ‘ ವನ್ಯಜೀವಿಗಳ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಪರಿಹಾರ, ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕಿದ್ದು, ಈ ಸಂಬಂಧ ಸಚಿವರು ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ. ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಕಡಿಮೆಯಾಗಿಲ್ಲ. ವನ್ಯಜೀವಿ ಹಾವಳಿಯಿಂದ ಜನರ ಪ್ರಾಣ ಹಾನಿ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಬೇಕು. ಬ್ಯಾರಿಕೇಡ್ ಅಳವಡಿಸುವುದು, ಟ್ರಂಚ್ ನಿರ್ಮಾಣ ಮಾಡುವುದು ಒಂದೆಡೆಯಾಗಿದೆ. ಆದರೂ, ಬಿ. ಶೆಟ್ಟಿಗೇರಿ ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಕಾಡಾನೆಗಳು ದಂಡು ದಂಡಾಗಿ ಬರುತ್ತಿವೆ. ಇವುಗಳನ್ನು ನಿಯಂತ್ರಣ ಮಾಡಬೇಕು ‘ ಎಂದರು.
ಶಾಸಕ ಡಾ. ಮಂತರ್ ಗೌಡ ಮಾತನಾಡಿ ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಸಮನ್ವಯತೆ ಇರಬೇಕು. ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಕಾಡಾನೆಗಳನ್ನು ಓಡಿಸುತ್ತಾರೆ. ಇದರಿಂದ, ಯಾವುದೇ ರೀತಿಯ ಪ್ರಯೋಜನವಿಲ್ಲ ಎಂದರು. ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೇಗೌಡ ಮಾತನಾಡಿ ಕಾಡಾನೆ ಹಾವಳಿ ಇಂದು ನಿನ್ನೆಯದಲ್ಲ. ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ನಿರಂತರವಾಗಿದ್ದು, ವನ್ಯಜೀವಿ ಹಾವಳಿ ತಡೆಯಲು ವೈಜ್ಞಾನಿಕ ಕಾರ್ಯಕ್ರಮ ರೂಪಿಸಬೇಕು. ಕಾಡುಗಳಲ್ಲಿ ಕೆರೆಗಳ ಸಂರಕ್ಷಣೆ ಮಾಡಬೇಕು. ನೀಲಗಿರಿ ಹಾಗೂ ಅಕೇಶಿಯಾ ಮರಗಳನ್ನು ತೆಗೆದು ಹಣ್ಣು, ಬಿದಿರು ಗಿಡ ಬೆಳೆಯುವಂತಾಗಬೇಕು. ಇದರಿಂದ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ 94ಸಿ ಮತ್ತು 94 ಸಿಸಿ ಅಡಿ ಬಾಕಿ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತದೆ. ಈ ಸಂಬಂಧ ಪ್ರತೀ ವಾರ ಪರಿಶೀಲಿಸಲಾಗುತ್ತಿದೆ. ಜಿಲ್ಲೆಯಲ್ಲಿ 700 ಕಾಣೆಯಾದ ಕಡತವಿದ್ದು, ಕಾಣೆಯಾದ ಕಡತಗಳನ್ನು ವಿಲೇವಾರಿ ಮಾಡಲಾಗುತ್ತಿದೆ. ಮುಂದಿನ ಮೂರು ನಾಲ್ಕು ತಿಂಗಳಲ್ಲಿ ಸಮಸ್ಯೆ ಬಗೆಹರಿಯಲಿದ್ದು, ಫಲಾನುಭವಿಗಳಿಗೆ ಆರ್ ಟಿ ಸಿ ದೊರೆಯಲಿದೆ. ಈ ಬಗ್ಗೆ ಸಭೆ ಮಾಡಲಾಗಿದೆ ಎಂದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಹುಲಿಗಳ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ : ವಿನಯ್ ಕುಮಾರ್
ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿರ್ದೇಶಕ ಎ. ಮಂಜು, ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎನ್. ವಿ. ಪ್ರಸಾದ್, ಜಿಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಜಿಪಂ.ಉಪ ಕಾರ್ಯದರ್ಶಿ ಅಬ್ದುಲ್ ನಬಿ, ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಇದ್ದರು.