ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಆಕೆಯ ತಂದೆ ಹಾಗೂ ಸಂಬಂಧಿಯೊಬ್ಬರ ವಿರುದ್ಧ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಕ್ಕಳ ಆರೈಕೆ ಕೇಂದ್ರದಲ್ಲಿದ್ದ ಬಾಲಕಿಯು ಕೌನ್ಸೆಲಿಂಗ್ ವೇಳೆ ತನ್ನ ಜೀವನದಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯದ ಘಟನೆಗಳನ್ನು ವಿವರಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಪೊಲೀಸರ ಪ್ರಕಾರ, ಬಾಲಕಿ ಚಿಕ್ಕವಳಿದ್ದಾಗ ಆಕೆಯ ತಂದೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ವಿಷಯ ಬಾಲಕಿಯ ತಾಯಿಯ ಗಮನಕ್ಕೆ ಬಂದ ನಂತರ ಬಾಲಕಿ ಹಾಗೂ ಆಕೆಯ ಅಕ್ಕನನ್ನು ಸಂಬಂಧಿಕರೊಬ್ಬರ ಮನೆಯಲ್ಲಿ ವಾಸಿಸಲು ಕಳುಹಿಸಲಾಗಿತ್ತು ಎನ್ನಲಾಗಿದೆ.
ಆದರೆ, ಸಂಬಂಧಿಕರ ಮನೆಯಲ್ಲಿ ವಾಸಿಸುತ್ತಿದ್ದ ಸಂದರ್ಭದಲ್ಲಿಯೂ ಬಾಲಕಿಗೆ ಸುರಕ್ಷತೆ ದೊರೆಯದೆ, ಯಾದಗಿರಿ ನಗರದ ಭಾಗ್ಯಂತಿ ಮಠಕ್ಕೆ ಸಂಬಂಧಿಸಿದ ಅರ್ಚಕರೊಬ್ಬರು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾಳೆ.
ಕೌನ್ಸೆಲಿಂಗ್ ವೇಳೆ ಬಾಲಕಿ ನೀಡಿದ ಹೇಳಿಕೆಯನ್ನು ಆಧರಿಸಿ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಾಲಕಿಯ ತಂದೆ ಹಾಗೂ ಸಂಬಂಧಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 75(2), 65(2) ಮತ್ತು ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸುವ ಪೋಕ್ಸೋ ಕಾಯ್ದೆಯ ಸೆಕ್ಷನ್ 4, 8 ಹಾಗೂ 10ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ | ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಆರೋಪಿಯ ಬಂಧನ
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದು, ಬಾಲಕಿಯ ಹೇಳಿಕೆ ಹಾಗೂ ಇತರೆ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.




