ಎಸ್‌ಐಆರ್ (ವಿಶೇಷ ಮತದಾರರ ತೀವ್ರ ಪರಿಷ್ಕರಣೆ) ವಿರೋಧಿಸಿ ಕರ್ನಾಟಕದ ಪ್ರಗತಿಪರ ಸಂಘಟನೆಗಳು ಹಾಗೂ ಜಾತ್ಯಾತೀತ ಪಕ್ಷಗಳ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ನಡೆಯುತ್ತಿರುವ ಜನಜಾಗೃತಿ ಜಾಥಾ ಅಂಗವಾಗಿ ಜೂನ್ 20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಮುಖಂಡರು ತಿಳಿಸಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎದ್ದೇಳು ಕರ್ನಾಟಕ ಜಿಲ್ಲಾ ಸಂಯೋಜಕ ಮರೆಪ್ಪ ಚಟ್ಟೇಕರ್, ಜಾಥಾದ ಉದ್ದೇಶ ಹಾಗೂ ಸಮಾವೇಶದ ರೂಪುರೇಷೆಗಳ ಕುರಿತು ಮಾಹಿತಿ ನೀಡಿದರು. ರಾಜ್ಯದ ವಿವಿಧ ಭಾಗಗಳಲ್ಲಿ ಎಸ್‌ಐಆರ್ ಕುರಿತು ಜನರಿಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದ್ದು, ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಾರ್ವಜನಿಕರಿಗೆ ಕರೆ ನೀಡಿದರು.
ಎದ್ದೇಳು ಕರ್ನಾಟಕ ಮುಖಂಡ ಜೆ.ಎಂ. ವೀರಸಂಗಯ್ಯ ಮಾತನಾಡಿ, “ಈ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಅಲ್ಪಸಂಖ್ಯಾತರು, ಮಹಿಳೆಯರು, ದಲಿತರು, ಹಿಂದುಳಿದವರು ಹಾಗೂ ಅಲೆಮಾರಿ ಸಮುದಾಯಗಳ ಪಾತ್ರ ಮಹತ್ವದ್ದಾಗಿದೆ. ಆದರೆ ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಮತದಾನದ ಹಕ್ಕಿನ ಮೇಲೆ ನಿರ್ಬಂಧ ಹೇರುವ ಪ್ರಯತ್ನ ನಡೆಯುತ್ತಿದೆ. ಇದರಿಂದ ಸಮಾಜದ ದುರ್ಬಲ ವರ್ಗಗಳ ಪ್ರಜಾಸತ್ತಾತ್ಮಕ ಹಕ್ಕುಗಳಿಗೆ ಧಕ್ಕೆಯಾಗುವ ಸಾಧ್ಯತೆಯಿದೆ” ಎಂದು ಆರೋಪಿಸಿದರು.
ಮತದಾನದ ಹಕ್ಕು ಸಂವಿಧಾನಬದ್ಧ ಹಕ್ಕಾಗಿದ್ದು, ಅದನ್ನು ದುರ್ಬಲಗೊಳಿಸುವ ಯಾವುದೇ ಕ್ರಮವನ್ನು ವಿರೋಧಿಸಬೇಕಿದೆ. ಇಲ್ಲವಾದಲ್ಲಿ ಜನರ ಹಕ್ಕುಗಳಿಗೆ ಧಕ್ಕೆ ಉಂಟಾಗಲಿದೆ ಎಂದು ಅವರು ಎಚ್ಚರಿಕೆ ನೀಡಿದರು. ಜೂನ್ 20ರಂದು ನಡೆಯುವ ಸಮಾವೇಶದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಇರ್ಪಾನ್ ಬಾದಲ್ ಮಾತನಾಡಿ, “ಎಸ್‌ಐಆರ್ ಹೆಸರಿನಲ್ಲಿ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಹಾಗೂ ಕಾರ್ಮಿಕ ವರ್ಗದ ಮತದಾನದ ಹಕ್ಕನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ. ಮತದಾರರ ಪಟ್ಟಿಯ ಪರಿಷ್ಕರಣೆ ವೇಳೆ ಪ್ರತಿಯೊಬ್ಬರೂ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ತಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಬೇಕು” ಎಂದು ಕರೆ ನೀಡಿದರು.
ರೈತ ಮುಖಂಡ ಮಲ್ಲಿಕಾರ್ಜುನ ಸತ್ಯಂಪೇಟೆ, ಗೋಪಾಲ ತಳಗೇರಿ, ಬಾಷುಮೀಯಾ ವಡಗೇರಾ, ನಿಂಗಪ್ಪ ಕೊಲ್ಲೂರಕರ್, ಫಕೀರುದ್ದೀನ್, ಚಂದ್ರ ಕರಹುಣಿಸೆ, ನಗರೂರ, ಭೀಮಣ್ಣ, ದುರುಗೇಶ ಬರಗೂರು, ಅಂಜನೇಯ್ಯ, ಚಂದ್ರಪ್ಪ ಜಿ, ಫಕೀರ ಅಹ್ಮದ, ಭೀಮರಾಯ ಹಾಲಗೇರಾ
ಇದನ್ನು ಓದಿದ್ದೀರಾ? ಕಲಬುರಗಿ | ಮತದಾರರ ಹಕ್ಕುಗಳ ರಕ್ಷಣೆಯೇ ಸಂವಿಧಾನದ ರಕ್ಷಣೆ: ಜೆ.ಎಂ. ವೀರ ಸಂಗಯ್ಯ
ಸುದ್ದಿಗೋಷ್ಠಿಯಲ್ಲಿ ಎದ್ದೇಳು ಕರ್ನಾಟಕ ವಲಯ ಸಂಚಾಲಕ ಲಕ್ಷ್ಮಣ ಮಂಡಲಗೇರಾ, ಜಿಲ್ಲಾ ಸಂಚಾಲಕ ರಾಜೇಂದ್ರ ರಾಜವಾಳ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.




