ಗುರು ಪೂರ್ಣಿಮೆ ಅಂಗವಾಗಿ ವಡಗೇರಾ ತಾಲೂಕಿನ ಯಕ್ಷಿಂತಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕರಿಗೆ ಗ್ರಾಮಸ್ಥರು ಸಂವಿಧಾನದ ಪುಸ್ತಕ ನೀಡಿ ಸನ್ಮಾನಿಸಿ ಗುರುವಂದನೆ ಸಲ್ಲಿಸಿದರು.
ಇದೆ ವೇಳೆ ನಿಂಗಣ್ಣ ಕರಡಿ ಮಾತನಾಡಿ, ‘ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಿದರೆ ಮಾತ್ರ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುವುದರ ಜೊತೆಗೆ ಸರ್ಕಾರಿ ಶಾಲೆಗಳ ಉಳಿವಿಗೂ ಸಹಕಾರಿಯಾಗುತ್ತದೆ’ ಎಂದು ಹೇಳಿದರು.
‘ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಬೇಕು. ಇತ್ತೀಚಿನ ದಿನಗಳಲ್ಲಿ ಪಾಲಕರು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳ ಶಿಕ್ಷಕರು ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಗ್ರಾಮಸ್ಥರು ಸಹ ಶಾಲೆಯ ಅಭಿವೃದ್ಧಿಗೆ ಕಾಳಜಿ ವಹಿಸಿ ಅಗತ್ಯ ಸಹಕಾರ ಹಾಗೂ ಪ್ರೋತ್ಸಾಹ ನೀಡಬೇಕು’ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಮಾರ್ತಂಡಪ್ಪ, ಅತಿಥಿ ಶಿಕ್ಷಕರಾದ ಭಾಗ್ಯಶ್ರೀ ಹಾಗೂ ಮಲ್ಲಿಕಾರ್ಜುನ ಅವರನ್ನು ಸನ್ಮಾನಿಸಲಾಯಿತು.
ಇದನ್ನು ಓದಿದ್ದೀರಾ? ನಿವೃತ್ತ ಬಸ್ ಚಾಲಕನ ಮನೆಯಲ್ಲಿ 15 ಕೆಜಿ ಚಿನ್ನ, 20 ಕೋಟಿ ರೂ. ಹಣ ಪತ್ತೆ!
ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹಣಮಂತ ದೊಡ್ಮನಿ, ಅಂಗನವಾಡಿ ಕಾರ್ಯಕರ್ತೆ ಅಮರಮ್ಮ, ಶರಣಪ್ಪ ಸೋತೆನೋರ ಸೇರಿದಂತೆ ಗ್ರಾಮಸ್ಥರು, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.




