ಸುರಪುರ ತಾಲೂಕಿನ ಕೆಂಭಾವಿ ಪುರಸಭೆ ವ್ಯಾಪ್ತಿಯ ಸರ್ಕಾರಿ ಉದ್ದೇಶಕ್ಕಾಗಿ ಮೀಸಲಿಟ್ಟ ಸಿ.ಎ. ನಿವೇಶನದಲ್ಲಿ ಅಕ್ರಮವಾಗಿ ಲಕ್ಷ್ಮೀ ದೇವಸ್ಥಾನ ನಿರ್ಮಿಸಲಾಗಿದೆ ಎಂದು ಆರೋಪಿಸಿ, ಕಟ್ಟಡ ತೆರವುಗೊಳಿಸುವಂತೆ ಆಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ ನಡೆಸಲಾಗುತ್ತಿದೆ.
ಕೆಂಭಾವಿ ಪಟ್ಟಣದ ಸರ್ವೆ ನಂ. 599/3ರಲ್ಲಿರುವ ಸಿ.ಎ. ನಿವೇಶನವನ್ನು ವಸತಿ ನಿಲಯ, ಅಂಗನವಾಡಿ ಕೇಂದ್ರ, ಕಂದಾಯ ಇಲಾಖೆ ಕಟ್ಟಡ ಹಾಗೂ ಗ್ರಂಥಾಲಯ ಸೇರಿದಂತೆ ವಿವಿಧ ಸಾರ್ವಜನಿಕ ಮತ್ತು ಸರ್ಕಾರಿ ಉದ್ದೇಶಗಳಿಗಾಗಿ ಮೀಸಲಿಡಲಾಗಿದೆ. ಆದರೆ, ಈ ಜಾಗದಲ್ಲಿ ಖಾಸಗಿ ವ್ಯಕ್ತಿಗಳು ನಿಯಮಗಳನ್ನು ಉಲ್ಲಂಘಿಸಿ ಲಕ್ಷ್ಮೀ ದೇವಸ್ಥಾನ ನಿರ್ಮಿಸಿದ್ದಾರೆ. ಸರ್ಕಾರಿ ಉದ್ದೇಶಕ್ಕಾಗಿ ಕಾಯ್ದಿರಿಸಿದ ನಿವೇಶನವನ್ನು ಖಾಸಗಿ ಬಳಕೆಗೆ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಸಂಘಟನೆಯ ಮುಖಂಡರು ಆರೋಪಿಸಿದ್ದಾರೆ.
ದೇವಸ್ಥಾನ ನಿರ್ಮಾಣಕ್ಕೆ ಕೆಂಭಾವಿ ಪುರಸಭೆಯ ಅಧಿಕಾರಿಗಳು ಸಹಕಾರ ನೀಡಿದ್ದಾರೆ ಎಂದು ಆರೋಪಿಸಿರುವ ಸಂಘಟನೆ, ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಬಾಗಲಿ, ವಿಷಯ ನಿರ್ವಾಹಕ ಮೌನೇಶ ಹಾಗೂ ಕರವಸೂಲಿಗಾರರಾದ ಸಿದ್ರಾಮ ಇಂಡಿ ಮತ್ತು ಭೀಮಣ್ಣ ದೊಡ್ಡಮನಿ ಅವರ ವಿರುದ್ಧ ಕರ್ತವ್ಯಲೋಪದಡಿ ಕ್ರಮ ಕೈಗೊಂಡು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದೆ.
ಈ ಕುರಿತು ಅಕ್ಟೋಬರ್ 13ರಂದು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ್ದರೂ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಜಾಗದ ಸಂರಕ್ಷಣೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವನ್ನು ಪ್ರಶ್ನಿಸಿರುವ ಸಂಘಟನೆ, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಅಕ್ರಮ ನಿರ್ಮಾಣಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದೆ.
ಅಕ್ರಮವಾಗಿ ನಿರ್ಮಿಸಿರುವ ದೇವಸ್ಥಾನದ ಕಟ್ಟಡವನ್ನು ತೆರವುಗೊಳಿಸಿ, ಸರ್ಕಾರಿ ಉದ್ದೇಶಕ್ಕಾಗಿ ಮೀಸಲಿಟ್ಟ ನಿವೇಶನವನ್ನು ಸಂರಕ್ಷಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ | ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು: ಸಾವಿನ ದವಡೆಯಿಂದ ಪಾರಾದ ಒಂದೇ ಕುಟುಂಬದ ನಾಲ್ವರು
ಧರಣಿಯಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯ ಕಾರ್ಯದರ್ಶಿಗಳಾದ ಶರಣಪ್ಪ ಜಮುಖಂಡಿ, ಕಾಶೀನಾಥ ನಾಟೇಕಾರ್, ಜಿಲ್ಲಾಧ್ಯಕ್ಷ ಜುಮ್ಮಣ್ಣ ಗುಡಿಮನಿ ಸೇರಿದಂತೆ ಸಂಘಟನೆಯ ಹಲವು ಕಾರ್ಯಕರ್ತರು ಭಾಗವಹಿಸಿದ್ದಾರೆ.






