ಅಪ್ರಾಪ್ತ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದಡಿ 75 ವರ್ಷದ ಅಜ್ಜನ ವಿರುದ್ಧ ಪೋಕ್ಸೋ ಸೇರಿದಂತೆ ವಿವಿಧ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ಸುರಪುರ ತಾಲೂಕಿನ ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸೆ.23ರಂದು ಘಟನೆ ನಡೆದಿದೆ ಎನ್ನಲಾಗಿದ್ದು, ಘಟನೆಗೆ ಸಂಬಂಧಿಸಿದ ಮಾಹಿತಿ ತಡವಾಗಿ ಪೊಲೀಸರ ಗಮನಕ್ಕೆ ಬಂದಿದೆ. ಶರಣಪ್ಪ ಟಣಕೇದಾರ್ ಎಂಬಾತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ವೇಳೆ ಚೂರಿ ತೋರಿಸಿ ಬೆದರಿಕೆ ಹಾಕಿದ್ದಲ್ಲದೆ, ಬಾಲಕಿಗೆ ಜೀವ ಬೆದರಿಕೆ ಒಡ್ಡಿದ ಆರೋಪವೂ ಕೇಳಿಬಂದಿದೆ.
ಘಟನೆ ನಡೆಯುತ್ತಿರುವುದನ್ನು ಗಮನಿಸಿದ ವ್ಯಕ್ತಿಯೊಬ್ಬರು ಕೂಡಲೇ 112 ತುರ್ತು ಸಹಾಯವಾಣಿಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.
ಬಾಲಕಿಯ ತಾಯಿ ಬೆಂಗಳೂರಿಗೆ ತೆರಳಿದ್ದ ಸಂದರ್ಭದಲ್ಲಿ ಆಕೆಯನ್ನು ಅಜ್ಜ-ಅಜ್ಜಿಯ ಮನೆಯಲ್ಲಿ ಬಿಟ್ಟು ಹೋಗಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲೇ ಬಾಲಕಿಯೊಂದಿಗೆ ಆರೋಪಿ ಅಸಭ್ಯವಾಗಿ ವರ್ತಿಸಿ ಕೃತ್ಯಕ್ಕೆ ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
This video cannot be played in your browser. Open the video directly
ಘಟನೆ ಬಳಿಕ ಬಾಲಕಿಯನ್ನು ರಕ್ಷಿಸಿ, ಅಗತ್ಯ ಚಿಕಿತ್ಸೆ ಹಾಗೂ ಆರೈಕೆಗಾಗಿ ಬಾಲಮಂದಿರಕ್ಕೆ ರವಾನಿಸಲಾಗಿದೆ. ಬಾಲಕಿಯ ಸುರಕ್ಷತೆ ಮತ್ತು ಪ್ರಕರಣದ ಸೂಕ್ಷ್ಮತೆಯನ್ನು ಪರಿಗಣಿಸಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನು ಓದಿದ್ದೀರಾ? ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು
ಈ ಸಂಬಂಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)ಯ 115(2), 109(1) ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಗಳ ಸತ್ಯಾಸತ್ಯತೆ ತನಿಖೆಯಿಂದ ತಿಳಿದುಬರಬೇಕಿದೆ.





