ನಿರ್ಮಾಣ ಹಂತದ ಚೆನ್ನೈ- ಸೂರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದೆ.
ಶುಕ್ರವಾರ ತಡರಾತ್ರಿ ಇಬ್ರಾಹಿಂ ಡಿಬಿಎಲ್ ಕ್ಯಾಂಪ್ ಸಮೀಪ ಈ ಅಪಘಾತ ಸಂಭವಿಸಿದ್ದು, ಕಾರು ರಸ್ತೆ ಪಕ್ಕದ ತಡೆಗೋಡೆಗೆ ಅಪ್ಪಳಿಸಿದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಗುರುರಾಜ್ ಚವ್ಹಾಣ್ (35), ರೆಡ್ಡಿ ರಾಠೋಡ್ (33), ಗೋವಿಂದ ಚವ್ಹಾಣ್ (28) ಹಾಗೂ ಕುಮಾರ್ ರಾಠೋಡ್ (26) ಎಂದು ಗುರುತಿಸಲಾಗಿದೆ. ಇವರಲ್ಲಿ ಒಬ್ಬರು ಲಿಂಗೇರಿ ತಾಂಡಾದ ನಿವಾಸಿಯಾಗಿದ್ದು, ಉಳಿದ ಮೂವರು ಮಲ್ಲಾರ್ ತಾಂಡಾದವರು ಎಂದು ತಿಳಿದುಬಂದಿದೆ.
ನಾಲ್ವರು ಯುವಕರು ಕಲಬುರಗಿ ಜಿಲ್ಲೆಯ ಜೇವರ್ಗಿಯಿಂದ ಯಾದಗಿರಿ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ನಿರ್ಮಾಣ ಹಂತದಲ್ಲಿರುವ ಚೆನ್ನೈ- ಸೂರತ್ ಎಕ್ಸ್‌ಪ್ರೆಸ್‌ವೇನಲ್ಲಿ ಕಾರು ವೇಗವಾಗಿ ಚಲಿಸುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ತೀವ್ರತೆಗೆ ಕಾರು ಜಖಂಗೊಂಡಿದ್ದು, ಅದರಲ್ಲಿದ್ದ ನಾಲ್ವರು ಯುವಕರು ಜೀವ ಕಳೆದುಕೊಂಡಿದ್ದಾರೆ. ಒಂದೇ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟಿರುವುದು ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ತೀವ್ರ ಶೋಕಕ್ಕೆ ಕಾರಣವಾಗಿದೆ.
ಇದನ್ನು ಓದಿದ್ದೀರಾ? ಯಾದಗಿರಿ | ವೆಂಕಟಪ್ಪ ನಾಯಕನ ನಾಡು ಸುರಪುರದಲ್ಲಿ ಅಸ್ಪೃಶ್ಯತೆ ಇಂದಿಗೂ ಜೀವಂತ!
ನಿರ್ಮಾಣ ಹಂತದ ಹೆದ್ದಾರಿಗಳಲ್ಲಿ ಸೂಕ್ತ ಸುರಕ್ಷತಾ ಕ್ರಮಗಳು, ಎಚ್ಚರಿಕೆ ಫಲಕಗಳು ಹಾಗೂ ವಾಹನಗಳ ವೇಗ ನಿಯಂತ್ರಣದ ಅಗತ್ಯವನ್ನು ಈ ಘಟನೆ ಮತ್ತೊಮ್ಮೆ ಎತ್ತಿ ತೋರಿಸಿದೆ.





