ಮಕ್ಕಳ ಹಕ್ಕುಗಳ ರಕ್ಷಣೆ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಸುರಕ್ಷಿತ ಬಾಲ್ಯವನ್ನು ಖಾತರಿಪಡಿಸುವುದು ಪ್ರತಿಯೊಬ್ಬರ ಸಾಮಾಜಿಕ ಜವಾಬ್ದಾರಿಯಾಗಿದೆ ಎಂದು ಕಾರ್ಯಕ್ರಮದ ಉದ್ಘಾಟನಾ ಭಾಷಣದಲ್ಲಿ ದೇವೇಂದ್ರಪ್ಪ ಗೌಡ ಪೊಲೀಸ್ ಪಾಟೀಲ್ ಹೇಳಿದರು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಶಹಾಪುರ, ತಾಲೂಕು ವಕೀಲರ ಸಂಘ, ಶಿಕ್ಷಣ ಇಲಾಖೆ ಹಾಗೂ ವರ್ಲ್ಡ್ ವಿಷನ್ ಇಂಡಿಯಾ ಕ್ಷೇತ್ರ ಅಭಿವೃದ್ಧಿ ಯೋಜನೆ ಶಹಾಪುರ ಇವರ ಸಂಯುಕ್ತ ಆಶ್ರಯದಲ್ಲಿ ‘ಸುರಕ್ಷಿತ ಬಚ್ಪನ್ ಅಭಿಯಾನ’ದ ಅಂಗವಾಗಿ ಹೊತಪೇಟ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಪೋಕ್ಸೋ ಕಾಯ್ದೆ, ಮಕ್ಕಳ ಹಕ್ಕುಗಳು ಹಾಗೂ ಮಕ್ಕಳಿಗೆ ಸುರಕ್ಷಿತ ವಾತಾವರಣ ಕಲ್ಪಿಸುವ ಕುರಿತು ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಶಹಾಪುರದ ಪ್ಯಾನಲ್ ವಕೀಲ ಶಿವಕುಮಾರ್ ಫಿರಂಗಿ ಅವರು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಮಾತನಾಡಿ, ‘ಬಾಲ್ಯವಿವಾಹ ಕಾನೂನುಬಾಹಿರವಾಗಿದ್ದು, ಇಂತಹ ಕೃತ್ಯಗಳಲ್ಲಿ ಭಾಗಿಯಾದವರಿಗೆ ಕಾನೂನಿನಡಿ ಶಿಕ್ಷೆ ವಿಧಿಸಲಾಗುತ್ತದೆ. ಬಾಲ್ಯವಿವಾಹವು ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ಮಕ್ಕಳು ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಬಾಲ್ಯವಿವಾಹ ತಡೆಗಟ್ಟಲು ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು’ ಎಂದು ತಿಳಿಸಿದರು.
ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ಅನಿಲ್ ತೇಜಪ್ಪ ಬಲ್ಲೂರ್ಕರ್ ಮಾತನಾಡಿ, ‘ಮಕ್ಕಳು ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಪ್ರಾಮಾಣಿಕತೆ, ಶಿಸ್ತು ಮತ್ತು ನಿರಂತರ ಪರಿಶ್ರಮ ಅಗತ್ಯ. ಶಿಕ್ಷಣದ ಮೂಲಕ ಉನ್ನತ ಗುರಿ ಹೊಂದಿ ಭವಿಷ್ಯ ರೂಪಿಸಿಕೊಳ್ಳಬೇಕು. ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಸುರಕ್ಷಿತ ಭವಿಷ್ಯ ನಿರ್ಮಾಣದಲ್ಲಿ ಪೋಷಕರು, ಶಿಕ್ಷಕರು ಮತ್ತು ಸಮುದಾಯದ ಪಾತ್ರ ಅತ್ಯಂತ ಮಹತ್ವದ್ದಾಗಿದೆ’ ಎಂದರು.
ಇದೇ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆ ಮತ್ತು ದೇಹದ ಹಕ್ಕುಗಳ ಕುರಿತು ಅರಿವು ಮೂಡಿಸುವ ‘ನನ್ನ ದೇಹ ನನ್ನ ಇಚ್ಛೆ’ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.
ಶಾಲೆಯ ಮುಖ್ಯಗುರು ಬಸವರಾಜೇಶ್ವರಿ ಮಾತನಾಡಿ, ‘ಮಕ್ಕಳ ಹಿತದೃಷ್ಟಿಯಿಂದ ಸರ್ಕಾರಿ ಇಲಾಖೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳು ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ. ಇವು ಮಕ್ಕಳಲ್ಲಿ ಕಾನೂನಿನ ಅರಿವು ಮೂಡಿಸುವುದರ ಜೊತೆಗೆ ತಮ್ಮ ಹಕ್ಕುಗಳು ಮತ್ತು ಸುರಕ್ಷತೆಯ ಬಗ್ಗೆ ಜವಾಬ್ದಾರಿಯುತ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ’ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಧರ್ಮಣ್ಣ, ಮಾಟಿನ್ ಶಾಂತಕುಮಾರ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹುಸೇನ್ ಪಾಷಾ ಉಪಸ್ಥಿತರಿದ್ದರು. ಅಯ್ಯೋಳಪ್ಪ ಸ್ವಾಗತಿಸಿದರು. ವಸಂತ್ ಹೊಸಮನೆ ನಿರೂಪಿಸಿದರು. ಶಿಕ್ಷಕಿ ಈರಮ್ಮ ವಂದಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರ: ದುರಸ್ತಿಗೆ ದಲಿತ ಸೇನೆ ಆಗ್ರಹ
ಶಾಲೆಯ ವಿದ್ಯಾರ್ಥಿಗಳು, ಪೋಷಕರು, ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.






