ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಬಳಸಿದ ಸ್ಥಳವನ್ನು ಹೋಮ–ಹವನ ನಡೆಸಿ ಶುದ್ಧೀಕರಿಸಿದ ಘಟನೆಯನ್ನು ಖಂಡಿಸಿ, ಜಾತಿವಾದಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ಯಾದಗಿರಿ ಜಿಲ್ಲಾ ಶಾಖೆ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.
ದಸಂಸ ರಾಜ್ಯ ಸಂಚಾಲಕ ಡಾ. ಡಿ.ಜಿ. ಸಾಗರ ಅವರ ಕರೆಯ ಮೇರೆಗೆ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿ, ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪ್ರತಿಭಟನಾಕಾರರು ಮಾತನಾಡಿ, ‘ಸಾರ್ವಜನಿಕ ಸಭೆಯಲ್ಲಿ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಬಳಸಿದ ಸ್ಥಳವನ್ನು ಜಾತಿಯ ಆಧಾರದ ಮೇಲೆ ಹೋಮ–ಹವನ ನಡೆಸಿ ಶುದ್ಧೀಕರಿಸಿರುವುದು ಅತ್ಯಂತ ಖಂಡನೀಯ. ಇಂತಹ ಕೃತ್ಯಗಳು ಸಂವಿಧಾನ ಪ್ರತಿಪಾದಿಸುವ ಸಮಾನತೆ, ಸಹೋದರತ್ವ ಹಾಗೂ ಸಾಮಾಜಿಕ ನ್ಯಾಯದ ಆಶಯಗಳಿಗೆ ವಿರುದ್ಧವಾಗಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ದೇಶದಲ್ಲಿ ಅಸ್ಪೃಶ್ಯತೆ ಮತ್ತು ಜಾತಿ ಆಧಾರಿತ ತಾರತಮ್ಯವನ್ನು ಕಾನೂನಿನ ಮೂಲಕ ನಿಷೇಧಿಸಲಾಗಿದ್ದರೂ, ಇಂತಹ ಘಟನೆಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಜಾತಿಯ ಹೆಸರಿನಲ್ಲಿ ವ್ಯಕ್ತಿಯೊಬ್ಬರನ್ನು ಅವಮಾನಿಸುವ ಅಥವಾ ಅವರು ಬಳಸಿದ ಸ್ಥಳವನ್ನು ಶುದ್ಧೀಕರಿಸುವ ಮೂಲಕ ಸಾಮಾಜಿಕವಾಗಿ ಕೀಳಾಗಿ ಕಾಣುವ ಮನೋಭಾವವನ್ನು ಯಾವುದೇ ಕಾರಣಕ್ಕೂ ಸಹಿಸಬಾರದು’ ಎಂದು ಒತ್ತಾಯಿಸಿದರು.

‘ಸಂವಿಧಾನ ಎಲ್ಲ ನಾಗರಿಕರಿಗೂ ಸಮಾನ ಹಕ್ಕು, ಗೌರವ ಮತ್ತು ಸ್ವಾತಂತ್ರ್ಯವನ್ನು ನೀಡಿದೆ. ಹೀಗಾಗಿ ಜಾತಿ, ಧರ್ಮ ಅಥವಾ ಯಾವುದೇ ಕಾರಣದ ಆಧಾರದ ಮೇಲೆ ತಾರತಮ್ಯ ನಡೆಸುವವರ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಘಟನೆಗೆ ಕಾರಣರಾದವರನ್ನು ಗುರುತಿಸಿ, ಸೂಕ್ತ ಕಾನೂನು ಕ್ರಮ ಜರುಗಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
‘ಅಸ್ಪೃಶ್ಯತೆ ನಿರ್ಮೂಲನೆ ಹಾಗೂ ಸಾಮಾಜಿಕ ಸಮಾನತೆಗಾಗಿ ದಲಿತ ಸಂಘರ್ಷ ಸಮಿತಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ಇಂತಹ ಜಾತಿವಾದಿ ಕೃತ್ಯಗಳ ವಿರುದ್ಧ ಮುಂದೆಯೂ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಮುಖಂಡರು ಎಚ್ಚರಿಸಿದರು.
ನಂತರ ಪ್ರತಿಭಟನಾಕಾರರು ‘ಜಿಲ್ಲಾಡಳಿತದ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಿದರು, ಘಟನೆ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಇದನ್ನು ಓದಿದ್ದೀರಾ? ಬಾಲ್ಯವಿವಾಹ | ಕಲ್ಯಾಣ ಕರ್ನಾಟಕದಲ್ಲಿ ಎರಡೂವರೆ ವರ್ಷದಲ್ಲಿ 154 ಬಾಲಕಿಯರು ಹಸೆಮಣೆಗೆ!
ಈ ಸಂದರ್ಭದಲ್ಲಿ ದಸಂಸ ಮುಖಂಡರಾದ ಶಿವಪುತ್ರ ಜವಾಳಿ, ಚಂದಪ್ಪ ಕಟ್ಟಿಮನಿ, ಶಿವಲಿಂಗ, ಶರಬಣ್ಣ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು, ವಿವಿಧ ಘಟಕಗಳ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.




