ವಡಗೇರಾ ತಾಲ್ಲೂಕಿನ ಕೊಂಕಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕಲುಷಿತ ನೀರು ನಿಂತಿರುವುದರಿಂದ ವಿದ್ಯಾರ್ಥಿಗಳು ಅನಾರೋಗ್ಯಕರ ವಾತಾವರಣದಲ್ಲಿ ವಿದ್ಯಾಭ್ಯಾಸ ನಡೆಸುವಂತಾಗಿದೆ ಎಂದು ಸಮತಾ ಸೈನಿಕ ದಳ ಆರೋಪಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಮತಾ ಸೈನಿಕ ದಳದ ಯಾದಗಿರಿ ಜಿಲ್ಲಾ ಅಧ್ಯಕ್ಷ ಹತ್ತಿಗೂಡೂರ್ ಶರಣರೆಡ್ಡಿ, ಶಾಲಾ ಆವರಣದಲ್ಲಿ ಕಲುಷಿತ ನೀರು ನಿಂತಿರುವುದರಿಂದ ವಿದ್ಯಾರ್ಥಿಗಳು ಪ್ರತಿನಿತ್ಯ ತೊಂದರೆ ಅನುಭವಿಸುತ್ತಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ ಎಂದು ತಿಳಿಸಿದ್ದಾರೆ.
ಮಳೆಗಾಲದಲ್ಲಿ ಸಮಸ್ಯೆ ಮತ್ತಷ್ಟು ಗಂಭೀರವಾಗಿದ್ದು, ವಿದ್ಯಾರ್ಥಿಗಳ ಆರೋಗ್ಯ ಹಾಗೂ ಶಿಕ್ಷಣದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಶಾಲಾ ಆವರಣದ ಸ್ವಚ್ಛತಾ ಕಾರ್ಯ ಕೈಗೊಂಡು ಕಲುಷಿತ ನೀರನ್ನು ತೆರವುಗೊಳಿಸಬೇಕು. ಜೊತೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ವಿದ್ಯಾರ್ಥಿಗಳಿಗೆ ಸುರಕ್ಷಿತ ಹಾಗೂ ಆರೋಗ್ಯಕರ ಶೈಕ್ಷಣಿಕ ವಾತಾವರಣ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಶಿಕ್ಷಣ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಸಂಬಂಧಪಟ್ಟ ಆಡಳಿತಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಮಕ್ಕಳಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಕಲಿಕಾ ವಾತಾವರಣ ಒದಗಿಸುವುದು ಸರ್ಕಾರ ಮತ್ತು ಆಡಳಿತದ ಆದ್ಯ ಕರ್ತವ್ಯವಾಗಬೇಕು ಎಂದು ಅವರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಯಾದಗಿರಿ | ಬರಪೀಡಿತ ಪ್ರದೇಶವೆಂದು ಘೋಷಿಸಿ; ಪ್ರತಿ ಎಕರೆಗೆ ₹50 ಸಾವಿರ ಪರಿಹಾರಕ್ಕೆ ಜಯ ಕರ್ನಾಟಕ ಸಂಘಟನೆ ಆಗ್ರಹ
ಸಮಸ್ಯೆಯನ್ನು ನಿರ್ಲಕ್ಷಿಸಿದರೆ ಸಮತಾ ಸೈನಿಕ ದಳವು ಪೋಷಕರು ಹಾಗೂ ಸಾರ್ವಜನಿಕರೊಂದಿಗೆ ಸೇರಿ ಹಂತ ಹಂತವಾಗಿ ಉಗ್ರ ಹೋರಾಟ ನಡೆಸಲಿದೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳೇ ಸಂಪೂರ್ಣ ಹೊಣೆಗಾರರಾಗಿರುತ್ತಾರೆ ಎಂದು ಹತ್ತಿಗೂಡೂರ್ ಶರಣರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ವರದಿ : ದೇವೇದ್ರ ಹುಲಕಲ್





