ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಭಕ್ತರ ಮೇಲೆ ದೊಣ್ಣೆ ಹಾಗೂ ಕಲ್ಲುಗಳಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿ ಬಂದಿದೆ.
ಚಾಮನಾಳ ಗ್ರಾಮದ ಭಕ್ತರು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಗುರುಸುಣಿಗಿ ಗ್ರಾಮದ ಕೆಲ ಯುವಕರು ಅವರನ್ನು ಗುರಿಯಾಗಿಸಿಕೊಂಡು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಏಕಾಏಕಿ ನಡೆದ ದಾಳಿಯಲ್ಲಿ ದೊಣ್ಣೆ ಹಾಗೂ ಕಲ್ಲುಗಳಿಂದ ಮನಬಂದಂತೆ ಹಲ್ಲೆ ನಡೆಸಲಾಗಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗಂಭೀರವಾಗಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಜಾತಿ ನಿಂದನೆ ಹಾಗೂ ಕೊಲೆಯತ್ನ ಸೇರಿದಂತೆ ವಿವಿಧ ಗಂಭೀರ ಆರೋಪಗಳು ಕೇಳಿಬಂದಿವೆ.
ಈ ಸಂಬಂಧ ವಡಗೇರಾ ಪೊಲೀಸ್ ಠಾಣೆಯಲ್ಲಿ 14 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನು ಓದಿದ್ದೀರಾ? ಯಾದಗಿರಿ | ಬಾಲ ಕಾರ್ಮಿಕರ ಬಳಕೆ ಕಂಡುಬಂದರೆ ಕಠಿಣ ಕ್ರಮ: ಪಿಎಸ್‌ಐ ರಾಹುಲ್ ಪವಾಡೆ ಎಚ್ಚರಿಕೆ
ಉಳಿದ ಆರೋಪಿಗಳನ್ನು ಕೂಡಲೇ ಬಂಧಿಸಿ, ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.





