ನಗರದ ಸಾರ್ವಜನಿಕ ಸೇವೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಲು ಜಿಲ್ಲಾಧಿಕಾರಿ ರಾಹುಲ್ ಪಾಂಡೈ ಮಂಗಳವಾರ ಬೆಳಿಗ್ಗೆ ಇಂದಿರಾ ಕ್ಯಾಂಟೀನ್‌ಗೆ ದಿಢೀರ್ ತಪಾಸಣೆ ನಡೆಸಿದರು.
ಮೊದಲಿಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ವೃತ್ತಕ್ಕೆ ಭೇಟಿ ನೀಡಿದ ಅವರು, ಅಲ್ಲಿ ನಡೆಯುತ್ತಿರುವ ಅಭಿವೃದ್ಧಿ ಹಾಗೂ ಸೌಂದರ್ಯೀಕರಣ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಂಡು, ನಿಗದಿತ ಅವಧಿಯೊಳಗೆ ಕೆಲಸ ಪೂರ್ಣಗೊಳಿಸುವಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಳಿಕ ಗಂಜ್ ಪ್ರದೇಶದ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಆಹಾರ ತಯಾರಿಕೆ, ಅಡುಗೆ ಕೋಣೆ, ಸ್ವಚ್ಛತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಸಾರ್ವಜನಿಕರಿಗೆ ಶುಚಿ ಹಾಗೂ ಗುಣಮಟ್ಟದ ಆಹಾರ ಒದಗಿಸುವಲ್ಲಿ ಯಾವುದೇ ನಿರ್ಲಕ್ಷ್ಯ ತೋರದಂತೆ ಸಿಬ್ಬಂದಿಗೆ ಸೂಚಿಸಿದರು.
ಕ್ಯಾಂಟೀನ್‌ನ ಆರ್.ಒ. ಘಟಕ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಸಾರ್ವಜನಿಕರಿಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ಲಭ್ಯವಾಗಬೇಕು. ಸರ್ಕಾರ ನಿಗದಿಪಡಿಸಿರುವ ದರದಲ್ಲಿಯೇ ಆಹಾರ ನೀಡಬೇಕು ಹಾಗೂ ಸಾರ್ವಜನಿಕರಿಂದ ಹೆಚ್ಚುವರಿ ಹಣ ವಸೂಲಿ ಮಾಡದಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಇದೇ ವೇಳೆ ನಗರದ ಸ್ವಚ್ಛತೆಯನ್ನೂ ಪರಿಶೀಲಿಸಿದ ಅವರು, ಹೊಸಹಳ್ಳಿ ಕ್ರಾಸ್‌ನಿಂದ ಗಂಜ್‌ವರೆಗಿನ ಪ್ರಮುಖ ರಸ್ತೆಯ ಎರಡೂ ಬದಿಗಳನ್ನು ಪ್ರತಿದಿನ ಸ್ವಚ್ಛವಾಗಿಡುವಂತೆ ಪೌರಕಾರ್ಮಿಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನು ಓದಿದ್ದೀರಾ? ಯಾದಗಿರಿ | ಬೆಳೆ ಕೈಕೊಟ್ಟು ಸಾಲದ ಹೊರೆ ಹೆಚ್ಚಳ: ರೈತ ಆತ್ಮಹತ್ಯೆ
ಪರಿಶೀಲನೆ ವೇಳೆ ಪೌರಾಯುಕ್ತ ಉಮೇಶ್ ಚವ್ಹಾಣ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಪುನರಾವರ್ತಿತ ಅಂಶಗಳನ್ನು ಸಂಕ್ಷಿಪ್ತಗೊಳಿಸಿ





