ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ ಹಲ್ಲೆ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಬೇಕು ಎಂದು ಒಳ ಮೀಸಲಾತಿ ಹೋರಾಟಗಾರ ಮಲ್ಲು ಹಲಗಿ ಕುರುಕುಂದ ಆಗ್ರಹಿಸಿದ್ದಾರೆ.
ಈ ಕುರಿತು ಸಮಾಜ ಕಲ್ಯಾಣ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ಮನವಿ ಸಲ್ಲಿಸಿದ ಅವರು, ‘ಕಳೆದ ಮೂರು ತಿಂಗಳಲ್ಲಿ ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಯಾದಗಿರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ದಲಿತರ ಮೇಲೆ ಹಲವು ಗಂಭೀರ ಪ್ರಕರಣಗಳು ನಡೆದಿವೆ. ಘಟನೆಗಳ ಹಿನ್ನೆಲೆ ಮತ್ತು ಕಾರಣಗಳ ಕುರಿತು ಸಮಗ್ರ ತನಿಖೆ ನಡೆಯಬೇಕಿದ್ದು, ಸರ್ಕಾರ ಪ್ರಕರಣಗಳನ್ನು ಸಿಐಡಿಗೆ ವಹಿಸಬೇಕು’ ಎಂದು ಒತ್ತಾಯಿಸಿದರು.
‘ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಗಣೇಶೋತ್ಸವದ ವೇಳೆ ದಲಿತ ಯುವಕ ಸಿಂಹಾದ್ರಿ ಹತ್ಯೆ, ರಾಯಚೂರು ಜಿಲ್ಲೆಯ ಭೂಮಾನಂದ ಕೊಲೆ ಹಾಗೂ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರಸುಣಗಿ ಗುಡ್ಡದ ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ಚಾಮನಹಳ್ಳಿ ಗ್ರಾಮದ ಮಾದಿಗರ ಮೇಲೆ ನಡೆದ ಮರಣಾಂತಿಕ ಹಲ್ಲೆ ಪ್ರಕರಣಗಳನ್ನು ಉಲ್ಲೇಖಿಸಿದ ಅವರು, ರಾಜ್ಯದ ವಿವಿಧೆಡೆ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳ ಬಗ್ಗೆ ಅನುಮಾನಗಳಿದ್ದು, ಸಮಗ್ರ ತನಿಖೆಯಿಂದ ಸತ್ಯಾಂಶ ಹೊರಬರಬೇಕು’ ಎಂದರು.
‘ಪ್ರಕರಣಗಳ ತನಿಖೆಯಲ್ಲಿ ಪೊಲೀಸ್ ಇಲಾಖೆಯ ನಿರ್ಲಕ್ಷ್ಯ ಅಥವಾ ಕರ್ತವ್ಯಲೋಪ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಎಲ್ಲಾ ಆರೋಪಿಗಳನ್ನು ಶೀಘ್ರ ಬಂಧಿಸಿ, ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ರಕ್ಷಣೆ ಹಾಗೂ ಕಾನೂನುಬದ್ಧ ಪರಿಹಾರ ಒದಗಿಸಬೇಕು’ ಎಂದು ಮನವಿ ಮಾಡಿದರು.
‘ದಲಿತರ ಮೇಲಿನ ಗಂಭೀರ ದೌರ್ಜನ್ಯ ಪ್ರಕರಣಗಳ ವಿಚಾರಣೆಯನ್ನು ತ್ವರಿತಗೊಳಿಸಲು ರಾಜ್ಯದಲ್ಲಿ ವಿಶೇಷ ಫಾಸ್ಟ್‌ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಂಡು, ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು’ ಎಂದು ಮಲ್ಲು ಹಲಗಿ ಒತ್ತಾಯಿಸಿದರು.
ಇದನ್ನು ಓದಿದ್ದೀರಾ? ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ
ಈ ಸಂದರ್ಭದಲ್ಲಿ ಎಂಆರ್‌ಎಚ್‌ಎಸ್ ರಾಜ್ಯಾಧ್ಯಕ್ಷ ಶಿವರಾಯ ಅಕ್ಕರಿಕಿ, ಹಣಮಂತ ಮಾಲಹಳ್ಳಿ ಸೇರಿದಂತೆ ಇತರರು ಇದ್ದರು.




