ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು ವರ್ಗೀಕರಿಸಿ ರಾಜಕೀಯ ಒಳಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ತಕ್ಷಣ ಆದೇಶ ಹೊರಡಿಸಬೇಕು ಎಂದು ಮಾದಿಗ ದಂಡೋರ ಎಂಆರ್‌ಪಿಎಸ್ ರಾಜ್ಯ ಕಾರ್ಯದರ್ಶಿ ಹಾಗೂ ಯಾದಗಿರಿ ಜಿಲ್ಲಾಧ್ಯಕ್ಷ ಕಾಶಪ್ಪ ಮಾದಿಗ ಒತ್ತಾಯಿಸಿದರು.
ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರಿಶಿಷ್ಟ ಜಾತಿಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒಳಮೀಸಲಾತಿ ಕಲ್ಪಿಸಿರುವ ಮಾದರಿಯಲ್ಲೇ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲೂ ರಾಜಕೀಯ ಒಳಮೀಸಲಾತಿ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.
‘ಗ್ರಾಮೀಣ ಪ್ರದೇಶಗಳಲ್ಲಿ ಹೊಲೆಯ ಮತ್ತು ಮಾದಿಗ ಸಮುದಾಯಗಳು ಜಾತಿ ತಾರತಮ್ಯದಿಂದಾಗಿ ರಾಜಕೀಯ ಪ್ರಾತಿನಿಧ್ಯ ಪಡೆಯುವಲ್ಲಿ ಹಿನ್ನಡೆ ಅನುಭವಿಸುತ್ತಿವೆ. ಪ್ರಬಲ ಸಮುದಾಯಗಳು ಒಗ್ಗಟ್ಟಾಗಿ ಸ್ಪರ್ಧಿಸುವುದರಿಂದ ಈ ಸಮುದಾಯಗಳ ಅಭ್ಯರ್ಥಿಗಳು ಚುನಾವಣೆಯಲ್ಲಿ ಸೋಲನುಭವಿಸುವಂತಾಗಿದೆ. ಕಳೆದ ಐದು ದಶಕಗಳಿಂದ ಈ ಸಮಸ್ಯೆ ಮುಂದುವರಿದಿದ್ದು, ಪ್ರತಿ ತಾಲ್ಲೂಕಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳ ಸಂದರ್ಭದಲ್ಲಿ ಪರಿಶಿಷ್ಟ ಜಾತಿಗಳ ಅಭ್ಯರ್ಥಿಗಳು ಸುಮಾರು 20ರಿಂದ 25 ಸ್ಥಾನಗಳನ್ನು ಕಳೆದುಕೊಳ್ಳುತ್ತಿದ್ದಾರೆ.’ ಎಂದು ಅವರು ಆರೋಪಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ
‘2026–27ನೇ ಸಾಲಿನಲ್ಲಿ ನಡೆಯಲಿರುವ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲೇ ಪರಿಶಿಷ್ಟ ಜಾತಿಗಳ ಪ್ರವರ್ಗ-ಎಗೆ ಶೇ. 5.25, ಪ್ರವರ್ಗ-ಬಿಗೆ ಶೇ. 5.25 ಹಾಗೂ ಪ್ರವರ್ಗ-ಸಿಗೆ ಶೇ. 4.5ರಷ್ಟು ರಾಜಕೀಯ ಒಳಮೀಸಲಾತಿ ಕಲ್ಪಿಸಬೇಕು. ಈ ಮೂಲಕ ಹೊಲೆಯ ಮತ್ತು ಮಾದಿಗ ಸಮುದಾಯಗಳಿಗೆ ಸ್ಥಳೀಯ ಆಡಳಿತದಲ್ಲಿ ನ್ಯಾಯಯುತ ರಾಜಕೀಯ ಪ್ರಾತಿನಿಧ್ಯ ದೊರೆಯುವಂತೆ ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.






