ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಹಾಗೂ ಅಗತ್ಯ ಕಾಮಗಾರಿಗಳ ಅನುಷ್ಠಾನಕ್ಕಾಗಿ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ವತಿಯಿಂದ ರಾಜ್ಯ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಪ್ರಧಾನ ಸಂಚಾಲಕ ಅಮರೇಶ್ ತೇಲಗೂರ ಅವರ ನೇತೃತ್ವದಲ್ಲಿ ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ದೋರನಹಳ್ಳಿ ಪಟ್ಟಣ ಪಂಚಾಯಿತಿಯ ಅಭಿವೃದ್ಧಿ ಕಾರ್ಯಗಳಿಗೆ ತಕ್ಷಣ ಅನುದಾನ ಒದಗಿಸುವಂತೆ ಒತ್ತಾಯಿಸಲಾಯಿತು.
ದೋರನಹಳ್ಳಿ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ್ದರೂ, ಅಗತ್ಯ ಅನುದಾನದ ಕೊರತೆಯಿಂದಾಗಿ ಪಟ್ಟಣದ ಅಭಿವೃದ್ಧಿ ಕಾರ್ಯಗಳು ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ದೊರೆಯಬೇಕಾದ ಮೂಲಭೂತ ಸೌಲಭ್ಯಗಳು ಕುಂಠಿತಗೊಂಡಿವೆ ಎಂದು ಸಂಘಟನೆ ಅಸಮಾಧಾನ ವ್ಯಕ್ತಪಡಿಸಿದೆ.
ಪಟ್ಟಣದ ಜನರಿಗೆ ಸಮರ್ಪಕ ಕುಡಿಯುವ ನೀರು, ಉತ್ತಮ ರಸ್ತೆ, ಚರಂಡಿ ವ್ಯವಸ್ಥೆ ಹಾಗೂ ಸ್ವಚ್ಛತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಸರ್ಕಾರ ವಿಶೇಷ ಗಮನಹರಿಸಬೇಕು. ಪಟ್ಟಣ ಪಂಚಾಯಿತಿಯ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಕೂಡಲೇ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಅಮರೇಶ್ ತೇಲಗೂರ ಒತ್ತಾಯಿಸಿದರು.
ಅನುದಾನ ಬಿಡುಗಡೆ ಮಾಡದಿದ್ದರೆ ಉಗ್ರ ಹೋರಾಟ
ಈ ಕುರಿತು ಮಾತನಾಡಿದ ನಮ್ಮ ಕರ್ನಾಟಕ ಸೇನೆಯ ಶಹಾಪುರ ತಾಲೂಕು ಅಧ್ಯಕ್ಷ ಸಿದ್ದು ಪಟ್ಟೇದಾರ್, “ದೋರನಹಳ್ಳಿ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿ ಸುಮಾರು ಒಂದು ವರ್ಷ ಸಮೀಪಿಸುತ್ತಿದ್ದರೂ ಸರ್ಕಾರದಿಂದ ಅನುದಾನ ಬಿಡುಗಡೆ ಆಗಿಲ್ಲ. ಇದರಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದೆ. ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಮ್ಮ ಕರ್ನಾಟಕ ಸೇನೆಯ ವತಿಯಿಂದ ಸರ್ಕಾರದ ವಿರುದ್ಧ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.
ಇದನ್ನು ಓದಿದ್ದೀರಾ? ಯಾದಗಿರಿ | ಗೋಡೆಗೆ ಕಾರು ಡಿಕ್ಕಿ, ನಾಲ್ವರು ಯುವಕರು ಸ್ಥಳದಲ್ಲೇ ಸಾವು!
ಈ ಸಂದರ್ಭದಲ್ಲಿ ನಮ್ಮ ಕರ್ನಾಟಕ ಸೇನೆಯ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದು, ದೋರನಹಳ್ಳಿ ಪಟ್ಟಣದ ಅಭಿವೃದ್ಧಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹಿಸಿದರು.





