ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ನಾಗಲೋಟದ ವೇಗ ನೀಡಲಾಗುವುದು. ಯಾದಗಿರಿ ಉತ್ಸವ, ಆರೋಗ್ಯ ಕ್ಷೇತ್ರದ ಬಲವರ್ಧನೆ, ರಸ್ತೆ ಅಭಿವೃದ್ಧಿ, ಪ್ರವಾಸೋದ್ಯಮ ಹಾಗೂ ಶಿಕ್ಷಕರ ನೇಮಕಾತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಿಲ್ಲೆಯ ಪ್ರಮುಖ ಅಭಿವೃದ್ಧಿ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರವಾಗಿ ಪರಿಶೀಲನೆ ನಡೆಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಯಾದಗಿರಿ ಉತ್ಸವ ಆಯೋಜನೆ ಸೇರಿದಂತೆ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳನ್ನು ಪರಿಶೀಲಿಸಲಾಗುವುದು’ ಎಂದರು.
ಕಲ್ಯಾಣ ಕರ್ನಾಟಕಕ್ಕೆ 9 ಸಾವಿರ ಶಿಕ್ಷಕರ ಹುದ್ದೆ
‘ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ ಅಂತ್ಯ ಅಥವಾ ನವೆಂಬರ್‌ನಲ್ಲಿ ನೇಮಕಾತಿ ಪರೀಕ್ಷೆ ನಡೆಯುವ ಸಾಧ್ಯತೆ ಇದೆ. ಈ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಸುಮಾರು 9 ಸಾವಿರ ಹುದ್ದೆಗಳ ಅವಕಾಶ ದೊರೆಯಲಿದೆ’ ಎಂದು ಸಚಿವರು ಹೇಳಿದರು.
This video cannot be played in your browser. Open the video directly
‘371(ಜೆ) ಮೀಸಲಾತಿಯಡಿ ಕಲ್ಯಾಣ ಕರ್ನಾಟಕಕ್ಕೆ ಇನ್ನಷ್ಟು ಅವಕಾಶ ಕಲ್ಪಿಸುವ ಕುರಿತು ಸಂಪುಟ ಉಪಸಮಿತಿಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಈ ಭಾಗದ ಅಭ್ಯರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.
ರೈತರ ಸಾಲಮನ್ನಾ ಕುರಿತು ಕೇಂದ್ರದ ವಿರುದ್ಧ ವಾಗ್ದಾಳಿ
‘ರೈತರ ಸಾಲಮನ್ನಾ ವಿಚಾರವಾಗಿ ಮಾತನಾಡಿದ ಸಚಿವರು, ಹಿಂದಿನ ಯುಪಿಎ ಸರ್ಕಾರ ಹಾಗೂ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರೈತರ ಸಾಲಮನ್ನಾ ಮಾಡಿದ್ದವು. ಆದರೆ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಿಲ್ಲ’ ಎಂದು ಟೀಕಿಸಿದರು.
‘ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಪಕ್ಷಭೇದ ಮರೆತು ಎಲ್ಲ ಪಕ್ಷಗಳ ಜನಪ್ರತಿನಿಧಿಗಳು ಒಗ್ಗೂಡಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕಿದೆ’ ಎಂದು ಹೇಳಿದರು.
ಕೈಗಾರಿಕಾ ತ್ಯಾಜ್ಯ: ಎರಡು ಕಂಪನಿಗಳಿಗೆ ನೋಟಿಸ್
‘ಗುರುಮಠಕಲ್ ತಾಲೂಕಿನ ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಕಂಪನಿಗಳಿಂದ ರಾಸಾಯನಿಕ ತ್ಯಾಜ್ಯ ಹೊರಸೂಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗಿದೆ. ಪರಿಶೀಲನಾ ವರದಿ ಆಧರಿಸಿ ಎರಡು ಕಂಪನಿಗಳಿಗೆ ಕ್ಲೋಸರ್ ನೋಟಿಸ್ ಜಾರಿ ಮಾಡಲಾಗಿದೆ’ ಎಂದು ಸಚಿವರು ತಿಳಿಸಿದರು.
‘ಕೈಗಾರಿಕೆಗಳಿಂದ ಪರಿಸರಕ್ಕೆ ಹಾನಿಯಾಗದಂತೆ ನಿಯಮಗಳ ಪಾಲನೆಗೆ ಒತ್ತು ನೀಡಲಾಗುವುದು. ದೂರುಗಳ ಕುರಿತು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ’ ಎಂದರು.
ಹಿಮ್ಸ್‌ಗೆ ಮತ್ತಷ್ಟು ಸೌಲಭ್ಯ
‘ಯಾದಗಿರಿಯ ಹಿಮ್ಸ್ ಆಸ್ಪತ್ರೆಯಲ್ಲಿ ಎಂಆರ್‌ಐ ಯಂತ್ರ ಅಳವಡಿಸುವ ಪ್ರಕ್ರಿಯೆ ನಡೆಯುತ್ತಿದೆ. ಪರೀಕ್ಷೆ ಪೂರ್ಣಗೊಂಡ ನಂತರ ಯಂತ್ರವನ್ನು ಸಾರ್ವಜನಿಕ ಸೇವೆಗೆ ಲೋಕಾರ್ಪಣೆ ಮಾಡಲಾಗುವುದು’ ಎಂದು ಹೇಳಿದರು.
‘ಜಿಲ್ಲಾಸ್ಪತ್ರೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ನೇಮಕಾತಿಗೆ ಸಂಬಂಧಿಸಿದ ಆಕ್ಷೇಪಣೆಗಳ ಪರಿಶೀಲನೆ ಪೂರ್ಣಗೊಂಡ ಬಳಿಕ ಸಿಬ್ಬಂದಿಯನ್ನು ನೇಮಕ ಮಾಡಲಾಗುವುದು’ ಎಂದರು.
‘ಸಿಟಿ ಸ್ಕ್ಯಾನ್, ಅಲ್ಟ್ರಾಸೌಂಡ್ ಹಾಗೂ ಎಕ್ಸ್‌ರೇ ಸೇರಿದಂತೆ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಮತ್ತಷ್ಟು ಬಲಪಡಿಸುವುದರ ಜತೆಗೆ ರೇಡಿಯಾಲಜಿಸ್ಟ್ ಸೇರಿದಂತೆ ತಜ್ಞ ವೈದ್ಯಕೀಯ ಸಿಬ್ಬಂದಿ ನೇಮಕಕ್ಕೂ ಕ್ರಮ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.
‘ಹಿಮ್ಸ್‌ಗೆ ಹೆಚ್ಚುವರಿ ಪಿಜಿ ವೈದ್ಯಕೀಯ ಸೀಟುಗಳನ್ನು ಮಂಜೂರು ಮಾಡುವಂತೆ ಸಲ್ಲಿಸಿರುವ ಪ್ರಸ್ತಾವನೆಯ ಪರಿಶೀಲನೆಯೂ ನಡೆಯುತ್ತಿದೆ. ಇದರಿಂದ ಜಿಲ್ಲೆಯ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸೇವೆಗೆ ಮತ್ತಷ್ಟು ಅನುಕೂಲವಾಗಲಿದೆ’ ಎಂದರು.
ಪ್ರವಾಸಿ ತಾಣಗಳ ಅಭಿವೃದ್ಧಿಗೆ ಒತ್ತು
ಜಿಲ್ಲೆಯ ಐತಿಹಾಸಿಕ ಹಾಗೂ ಪ್ರವಾಸಿ ಮಹತ್ವ ಹೊಂದಿರುವ ಸಿರವಾಳ, ಶಹಾಪುರ ಸೇರಿದಂತೆ ಪ್ರಮುಖ ತಾಣಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುತ್ತಿದೆ. ಪ್ರವಾಸೋದ್ಯಮ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಸಹಭಾಗಿತ್ವದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ.
ಇದನ್ನು ಓದಿದ್ದೀರಾ? ಯಾದಗಿರಿ | ಲೈಂಗಿಕ ದೌರ್ಜನ್ಯ ಆರೋಪ; ರೈಲ್ವೆ ಪೊಲೀಸರ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು
‘ಈಗಾಗಲೇ ನೀಡಿರುವ ಅನುದಾನದ ಜತೆಗೆ ಪ್ರಸಕ್ತ ವರ್ಷದಲ್ಲಿ ಮತ್ತಷ್ಟು ಅನುದಾನ ಹಾಗೂ ಕಾಮಗಾರಿಗಳನ್ನು ಒದಗಿಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಪ್ರವಾಸಿ ತಾಣಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಉತ್ತೇಜನ ನೀಡಲಾಗುವುದು’ ಎಂದು ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.





