ಗ್ಯಾರಂಟಿ ಯೋಜನೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕಾದರೂ ರಾಜ್ಯದ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಿ ಅವರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಗುರುಮಠಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಆಗ್ರಹಿಸಿದರು.
ತಾಲೂಕಿನ ಹೊನಗೇರಾ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆಗಳು ಒಣಗಿ ರೈತರು ಆರ್ಥಿಕವಾಗಿ ಕಂಗೆಟ್ಟಿದ್ದು, ಹಲವೆಡೆ ಉದ್ಯೋಗ ಅರಸಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ರೈತರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರಾಷ್ಟ್ರೀಯ ಬ್ಯಾಂಕ್‌ಗಳು ಹಾಗೂ ಸಹಕಾರ ಸಂಘಗಳಿಂದ ಪಡೆದಿರುವ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಲು ಸುಮಾರು ₹30ರಿಂದ ₹40 ಸಾವಿರ ಕೋಟಿ ವೆಚ್ಚವಾಗಬಹುದು. ಅಗತ್ಯವಿದ್ದರೆ ಒಂದು ವರ್ಷದವರೆಗೆ ಗ್ಯಾರಂಟಿ ಯೋಜನೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಆ ಅನುದಾನವನ್ನು ಸಾಲಮನ್ನಾಕ್ಕೆ ಬಳಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದರು.
ಸಾಲದ ಹೊರೆ ಮತ್ತು ಬೆಳೆ ನಷ್ಟದಿಂದ ರೈತರು ಆತ್ಮಹತ್ಯೆಯಂತಹ ದುರ್ಘಟನೆಗಳಿಗೆ ಒಳಗಾಗದಂತೆ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ರೈತರನ್ನು ರಕ್ಷಿಸಬೇಕು ಎಂದು ಅವರು ಒತ್ತಾಯಿಸಿದರು. ಈ ಹಿಂದೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡಿದ್ದನ್ನು ಉಲ್ಲೇಖಿಸಿದ ಅವರು, ಅದೇ ರೀತಿಯ ರೈತಪರ ನಿರ್ಧಾರವನ್ನು ಈಗಿನ ಸರ್ಕಾರವೂ ಕೈಗೊಳ್ಳಬೇಕು ಎಂದು ಹೇಳಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಸಾಬೀತು; ಪ್ರಮುಖ ಆರೋಪಿಗೆ 20 ವರ್ಷ, ಮೂವರಿಗೆ ಜೈಲು ಶಿಕ್ಷೆ
ಕಾರ್ಯಕ್ರಮದ ಬಳಿಕ ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರು ಕುಡಿಯುವ ನೀರು, ರಸ್ತೆ ಸೇರಿದಂತೆ ವಿವಿಧ ಮೂಲಸೌಕರ್ಯ ಸಮಸ್ಯೆಗಳ ಕುರಿತು ಶಾಸಕರಿಗೆ ಮನವಿ ಸಲ್ಲಿಸಿದರು.




