ಸುರಪುರ ತಾಲೂಕಿನ ವಾಗಣಗೇರಾ ಗ್ರಾಮದಲ್ಲಿ ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಯುವ ರೈತ ಗೋಪಾಲಪ್ಪ ಕಟ್ಟಿಮನಿ ಅವರ ಕುಟುಂಬಕ್ಕೆ ತಕ್ಷಣ ಸೂಕ್ತ ಪರಿಹಾರ ನೀಡಬೇಕು ಹಾಗೂ ರಾಜ್ಯದ ಸಣ್ಣ ಮತ್ತು ಅತಿಸಣ್ಣ ರೈತರ ಕೃಷಿ ಸಾಲವನ್ನು ಮನ್ನಾ ಮಾಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ರಾಜ್ಯ ಸಮಿತಿ ಸರ್ಕಾರವನ್ನು ಒತ್ತಾಯಿಸಿದರು.
ಈ ಸಂಬಂಧ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ನೇತೃತ್ವದಲ್ಲಿ ಮಂಗಳವಾರ ಸುರಪುರ ತಹಸೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ತಹಸೀಲ್ದಾರರ ಮೂಲಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆ ಉದ್ದೇಶಿಸಿ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ‘ವಾಗಣಗೇರಾ ಗ್ರಾಮದ ಯುವ ರೈತ ಗೋಪಾಲಪ್ಪ ತಂದೆ ವಿಠೋಬ ಕಟ್ಟಿಮನಿ ಅವರು ಕೃಷಿಗಾಗಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ₹1.60 ಲಕ್ಷ ಹಾಗೂ ಖಾಸಗಿಯಾಗಿ ₹6 ರಿಂದ ₹7 ಲಕ್ಷದವರೆಗೆ ಸಾಲ ಪಡೆದಿದ್ದರು. ಈ ವರ್ಷ ಸಮರ್ಪಕ ಮುಂಗಾರು ಮಳೆಯಾಗದ ಕಾರಣ ಬೆಳೆ ಸಂಪೂರ್ಣ ಹಾನಿಗೀಡಾಗಿ ಸಾಲ ತೀರಿಸಲು ಸಾಧ್ಯವಾಗದೆ, ಜೂನ್ 24ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಹೇಳಿದರು.
‘ರಾಜ್ಯಾದ್ಯಂತ ಮುಂಗಾರು ವೈಫಲ್ಯದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಅನೇಕರು ಆತ್ಮಹತ್ಯೆಯಂತಹ ದುರ್ಘಟನೆಗಳಿಗೆ ತುತ್ತಾಗುತ್ತಿದ್ದಾರೆ. ಆದ್ದರಿಂದ ಮೃತ ರೈತನ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ಘೋಷಿಸಬೇಕು. ಜೊತೆಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲ ಪಡೆದಿರುವ ಸಣ್ಣ ಹಾಗೂ ಅತಿಸಣ್ಣ ರೈತರ ಕೃಷಿ ಸಾಲವನ್ನು ಮನ್ನಾ ಮಾಡಿ, ಸಂಕಷ್ಟದಲ್ಲಿರುವ ರೈತರಿಗೆ ವಿಶೇಷ ನೆರವು ಪ್ಯಾಕೇಜ್ ಘೋಷಿಸಬೇಕೆಂದು’ ಒತ್ತಾಯಿಸಿದರು.
ಸರ್ಕಾರ ರೈತರ ಸಂಕಷ್ಟವನ್ನು ಗಂಭೀರವಾಗಿ ಪರಿಗಣಿಸಿ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ 55 ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ರಾಜ್ಯ ಸಮಿತಿಯ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.




