ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಶಹಾಪುರ ತಾಲೂಕಿನ ಭೀ ಗುಡಿ ಬಾಪುಗೌಡ ವೃತ್ತದಲ್ಲಿ ನಡೆಯುತ್ತಿದ್ದ ಏಳು ದಿನಗಳ ಅಹೋರಾತ್ರಿ ಧರಣಿ ಬುಧವಾರ ತೀವ್ರ ಸ್ವರೂಪ ಪಡೆದುಕೊಂಡಿತು. ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ರೈತರು ಬೆಳಿಗ್ಗೆ 11 ಗಂಟೆಯಿಂದ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು. ಬೆಳೆಗಳಿಗೆ ಅಗತ್ಯ ನೀರು ಒದಗಿಸುವುದರ ಜೊತೆಗೆ ಎಕರೆಗೆ ₹50 ಸಾವಿರ ಬೆಳೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಮುಂದಿನ ದಿನಗಳಲ್ಲಿ ಜಿಲ್ಲೆ ಹಾಗೂ ರಾಜ್ಯಾದ್ಯಂತ ಬಂದ್ ಕರೆ ನೀಡಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿದರು. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟದಲ್ಲಿ ಪಾಲ್ಗೊಳ್ಳುವ ಮೂಲಕ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಶರಣು ಮಂದರವಾಡ, ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ಮಾತನಾಡಿ, “ನೀರಾವರಿ ಸಲಹಾ ಸಮಿತಿ, ನೀರಾವರಿ ಇಲಾಖೆ, ಕೃಷಿ ಇಲಾಖೆ ಹಾಗೂ ಕಂದಾಯ ಇಲಾಖೆಯ ಕಾರ್ಯವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ರೈತರಿಗೆ ಸಮರ್ಪಕವಾಗಿ ನೀರು ಪೂರೈಸುವ ವ್ಯವಸ್ಥೆ ಇಲ್ಲದಿದ್ದರೆ ಬಿತ್ತನೆ ಬೀಜಗಳನ್ನು ವಿತರಿಸಿದ್ದೇಕೆ? ರೈತರನ್ನು ಸಾಲದ ಸುಳಿಗೆ ಸಿಲುಕಿಸಿ ದಿವಾಳಿ ಮಾಡುವ ಉದ್ದೇಶ ಹೊಂದಿದ್ದೀರಾ?” ಎಂದು ಪ್ರಶ್ನಿಸಿದರು.
“ಕೃಷಿ, ತೋಟಗಾರಿಕೆ ಇಲಾಖೆ ಹಾಗೂ ತಾಲೂಕು ಆಡಳಿತ ರೈತರ ಸಭೆಗಳನ್ನು ನಡೆಸಿಲ್ಲ. ಬೆಳೆಗಳ ಸ್ಥಿತಿಗತಿ ಕುರಿತು ಜಾಗೃತಿ ಸಭೆಗಳನ್ನು ಆಯೋಜಿಸಿಲ್ಲ. ರೈತರ ಸಮಸ್ಯೆಗಳನ್ನು ಆಲಿಸುವ ಪ್ರಯತ್ನವೂ ನಡೆದಿಲ್ಲ ಎಂದು ಆರೋಪಿಸಿದ ಮುಖಂಡರು, ಗ್ರೇಡ್-2 ತಹಶೀಲ್ದಾರ್ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು. ಬೆಳೆ ಹಾನಿ ಹಾಗೂ ಬೆಳೆ ಪ್ರದೇಶದ ಕುರಿತು ಸಂಬಂಧಪಟ್ಟ ಇಲಾಖೆಗಳು ನಿಖರವಾದ ದಾಖಲೆಗಳನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು. ತಪ್ಪು ಮಾಹಿತಿಯಿಂದ ರೈತರಿಗೆ ಪರಿಹಾರ ದೊರೆಯದಂತಾಗಬಾರದು” ಎಂದು ಒತ್ತಾಯಿಸಿದರು.
ಬೆಳೆ ಪ್ರದೇಶದ ಕುರಿತು ವಿವಿಧ ಇಲಾಖೆಗಳು ಸಲ್ಲಿಸಿರುವ ಅಂಕಿ-ಅಂಶಗಳಲ್ಲಿ ಗೊಂದಲವಿದ್ದು, ಅಧಿಕಾರಿಗಳು ಸಮಗ್ರ ಪರಿಶೀಲನೆ ನಡೆಸಿ ನಿಖರ ಮಾಹಿತಿ ನೀಡಬೇಕು ಎಂದು ಆಗ್ರಹಿಸಿದರು.

ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ ವಿರುದ್ಧವೂ ಪ್ರತಿಭಟನಾಕಾರರು ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. “ಸ್ಥಳೀಯ ಶಾಸಕರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಿದ್ದರೆ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ರೈತರ ಸಮಸ್ಯೆಗಳನ್ನು ನೇರವಾಗಿ ತಿಳಿಸಬಹುದಿತ್ತು. ಆದರೆ ಬೇರೆ ಜಿಲ್ಲೆಯ ಸಚಿವರಿಗೆ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ಉಸ್ತುವಾರಿ ನೀಡಿರುವುದರಿಂದ ಈ ಭಾಗದ ರೈತರ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ” ಎಂದು ದೂರಿದರು.
“ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ರೈತರ ಪರವಾಗಿ ಸೂಕ್ತ ನಿರ್ಧಾರ ಕೈಗೊಂಡು ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು. ಶಹಾಪುರ ತಾಲೂಕು ಬಂದ್ ಮಾಡಿ ಎತ್ತಿನಗಾಡಿಗಳ ಸಮೇತ ಬೃಹತ್ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನಾ ಸ್ಥಳಕ್ಕೆ ಉಪ ಕೃಷಿ ನಿರ್ದೇಶಕರು, ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಅಪರ ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ಗ್ರೇಡ್-2 ತಹಶೀಲ್ದಾರ್ ಭೇಟಿ ನೀಡಿ ರೈತರ ಸಮಸ್ಯೆಗಳು ಮತ್ತು ಬೆಳೆಗಳ ಮಾಹಿತಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ರೈತರು ಮುಂದಿಟ್ಟಿರುವ ಬೇಡಿಕೆಗಳು ಹಾಗೂ ಬೆಳೆ ಹಾನಿಯ ವಿವರಗಳನ್ನು ಪರಿಶೀಲಿಸಿ ಸಂಬಂಧಪಟ್ಟ ದಾಖಲೆಗಳ ಸಮೇತ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಬಿಸಿಎಂ ಹಾಸ್ಟೆಲ್‌ಗಳಲ್ಲಿ ಆಹಾರ ಕಲಬೆರಕೆ ಆರೋಪ; ವಾರ್ಡನ್‌ಗಳು, ಅಧಿಕಾರಿಗಳ ಅಮಾನತಿಗೆ ಆಗ್ರಹ

ಬೆಳಿಗ್ಗೆ 11 ಗಂಟೆಗೆ ಆರಂಭವಾದ ರಸ್ತೆ ತಡೆ ಪ್ರತಿಭಟನೆ ಸಂಜೆವರೆಗೆ ಸುಮಾರು ಐದು ಗಂಟೆಗಳ ಕಾಲ ನಡೆಯಿತು. ಈ ಅವಧಿಯಲ್ಲಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಪ್ರತಿಭಟನಾಕಾರರು ರಸ್ತೆ ಮೇಲೆಯೇ ಕುಳಿತು ಊಟ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಧಿಕಾರಿಗಳ ಭರವಸೆಯ ಹಿನ್ನೆಲೆಯಲ್ಲಿ ರಸ್ತೆ ತಡೆ ಹಿಂಪಡೆಯಲಾಯಿತು. ಆದರೆ ರೈತರ ಬೇಡಿಕೆಗಳು ಈಡೇರುವವರೆಗೆ ಅಹೋರಾತ್ರಿ ಧರಣಿ ಮುಂದುವರಿಸಲು ಹೋರಾಟಗಾರರು ನಿರ್ಧರಿಸಿದ್ದಾರೆ.





